ಬಳ್ಳಾರಿ: ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಗರದ ಅಶೋಕ್ ನಗರದಲ್ಲಿರುವ ಚೌದ್ರಿ ರೆಸಿಡೆನ್ಸ್ ಪಿಜಿಯಲ್ಲಿ ಮಂಗಳವಾರ ಬೆಳಕಿಗೆ ಬಂದಿದೆ. ಸಿರುಗುಪ್ಪ ತಾಲೂಕಿನ ಟಿ.ರಾಂಪುರ ಗ್ರಾಮದ ನಿವಾಸಿ ವಿಶ್ವಾಸ್ (24) ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದ್ದು ವಿಶ್ವಾಸ್ ಅವರು ಬಳ್ಳಾರಿಯ RYMEC ಕಾಲೇಜಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು. ಪಿಜಿಯ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ ಎನ್ನಲಾಗುತ್ತಿದೆ.

ಮೃತದೇಹದ ತಲೆ ಹಾಗೂ ಎದೆಯ ಭಾಗದಲ್ಲಿ ಗಂಭೀರ ಗಾಯಗಳಿರುವುದು ಕಂಡುಬಂದಿದ್ದು, ಇದು ಸಾವಿನ ಹಿಂದೆ ಕೊಲೆ ಶಂಕೆಗೆ ಕಾರಣವಾಗಿದೆ. ವಿಶ್ವಾಸ್ ಹಾಗು ಪಿಜಿಯಲ್ಲಿದ್ದ ಕೆಲವು ಸಹಪಾಠಿಗಳ ನಡುವೆ ಇತ್ತೀಚೆಗೆ ಜಗಳ ನಡೆದಿತ್ತು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ವಿಶ್ವಾಸ್ ಅವರನ್ನು ಕೊಲೆಗೈದು ಬಳಿಕ ಆತ್ಮಹತ್ಯೆ ಮಾಡಿಕೊಂಡಂತೆ ಬಿಂಬಿಸಲು ನೇಣು ಬಿಗಿದ ಸ್ಥಿತಿಯಲ್ಲಿ ಶವವನ್ನಿಡಲಾಗಿದೆ ಎಂದು ಕುಟುಂಬದವರು ಗಂಭೀರ ಆರೋಪ ಮಾಡಿದ್ದಾರೆ. ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಸಂಬಂಧಿಕರು ಸ್ಥಳಕ್ಕೆ ಆಗಮಿಸಿ ಆಕ್ರೋಶ ವ್ಯಕ್ತಪಡಿಸಿದರು.

ಆದರಿಂದ ಕೌಲ್ ಬಜಾರ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ವರದಿ ಬಂದ ಬಳಿಕ ಸಾವಿಗೆ ನಿಖರ ಕಾರಣ ತಿಳಿಯಲಿದೆ ಎಂದು ಪೊಲೀಸರು ಹೇಳಿದ್ದಾರೆ. ಎಫ್ ಐಆರ್ ದಾಖಲಿಸಿಕೊಂಡಿರುವ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ. ವಿದ್ಯಾರ್ಥಿಯ ಸಾವಿನ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ ಎಂಬುದ್ದಾಗಿದೆ.














