ಮನೆ ಸುದ್ದಿ ಜಾಲ ಕೋವಿಡ್ ಬೂಸ್ಟರ್ ಡೋಸ್ ಲಸಿಕಾ ಅಭಿಯಾನಕ್ಕೆ ಚಾಲನೆ

ಕೋವಿಡ್ ಬೂಸ್ಟರ್ ಡೋಸ್ ಲಸಿಕಾ ಅಭಿಯಾನಕ್ಕೆ ಚಾಲನೆ

0

ಮೈಸೂರು (Mysuru): ಕೋವಿಡ್ ಬೂಸ್ಟರ್ ಡೋಸ್ ಲಸಿಕಾ ಅಭಿಯಾನಕ್ಕೆ ಮಹಾಪೌರರಾದ ಸುನಂದಾ ಪಾಲನೇತ್ರ ಚಾಲನೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪತ್ರಕರ್ತರ ಸಂಘ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದೊಂದಿಗೆ ಇಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಭವನದಲ್ಲಿ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.
ಬಳಿಕ ಮಾತನಾಡಿದ ಅವರು, ಈಗಾಗಲೇ ಗರಿಷ್ಠ ಪ್ರಮಾಣದಲ್ಲಿ ಇಳಿಕೆ ಕಂಡಿರುವ ಕೋವಿಡ್ ಅನ್ನು ಸಂಪೂರ್ಣವಾಗಿ ತೊಡೆದು ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಶ್ರಮಿಸುತ್ತಿದೆ. ಮೈಸೂರು ದಸರಾ ಆರಂಭವಾಗುವುದಕ್ಕೂ ಮೊದಲು ಬೂಸ್ಟರ್ ಡೋಸ್ ಅನ್ನು ಪ್ರತಿಯೊಬ್ಬರು ಹಾಕಿಸಿಕೊಳ್ಳುವುದು ಅಗತ್ಯವಾಗಿದೆ ಎಂದು ತಿಳಿಸಿದರು.
ಜಿಲ್ಲಾಧಿಕಾರಿಗಳಾದ ಡಾ.ಬಗಾದಿ ಗೌತಮ್ ಮಾತನಾಡಿ, ದಸರಾ ಸಂದರ್ಭದಲ್ಲಿ ನಗರದಲ್ಲಿ ಅಪಾರ ಸಂಖ್ಯೆಯಲ್ಲಿ ಜನರು ಸೇರುತ್ತಾರೆ. ಅಂತಹ ಸಂದರ್ಭದಲ್ಲಿ ಸಾಂಕ್ರಾಮಿಕ ರೋಗ ಹರಡದಂತೆ ನೋಡಿಕೊಳ್ಳುವುದು ಅತ್ಯವಶ್ಯಕವಾಗಿದ್ದು, ದಸರಾ ಸಂದರ್ಭದಲ್ಲಿ ಹೊರ ಜಿಲ್ಲೆ, ಹೊರ ರಾಜ್ಯ ಮತ್ತು ವಿದೇಶಗಳಿಂದಲೂ ಅಪಾರ ಸಂಖ್ಯೆಯಲ್ಲಿ ಪ್ರವಾಸಿಗರು ನಗರಕ್ಕೆ ಬರುತ್ತಾರೆ. ಈ ವೇಳೆ ಸಾಂಕ್ರಾಮಿಕ ರೋಗ ಹರಡದಂತೆ ನೋಡಿಕೊಳ್ಳುವುದಕ್ಕಾಗಿ ಲಸಿಕೆಯ ರಕ್ಷಣೆಯನ್ನು ಎಲ್ಲರಿಗೂ ನೀಡಬೇಕು ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ಕೆ.ಎಚ್.ಪ್ರಸಾದ್ ಅವರು ಮಾತನಾಡಿ, 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ಬೂಸ್ಟರ್ ಡೋಸ್ ನೀಡಲಾಗುತ್ತಿದ್ದು, ಈ ವರ್ಗದಲ್ಲಿ ನಾಲ್ಕು ಲಕ್ಷ ಮಂದಿ ಇದ್ದಾರೆ ಹಿರಿಯನಾಗರೀಕರಲ್ಲಿ ವಿಶೇಷವಾಗಿ 80 ವರ್ಷ ಮೇಲ್ಪಟ್ಟವರಿಗೆ ರಕ್ಷಣೆ ಅಗತ್ಯವಿದ್ದು, ಶೇ.30 ರಷ್ಟು ಜನರು ಪಡೆದಿದ್ದಾರೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ 12 -14 ವರ್ಷ ವಯಸ್ಸಿನವರು 90 ಸಾವಿರ ಜನರಿದ್ದಾರೆ. ಅವರಲ್ಲಿ ಮೊದಲು ಶೇ.100 ರಷ್ಟು ಮುಗಿದಿದ್ದು, 2 ನೇ ಡೋಸ್ ಪಡೆದವರು ಶೇ. 60 ರಷ್ಟು ಜನರು ಮಾತ್ರ ಇದ್ದಾರೆ. ಜಿಲ್ಲೆಯಲ್ಲಿ 24.9 ಲಕ್ಷ 18 ವರ್ಷ ಹಾಗೂ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರಿದ್ದು ಅವರೆಲ್ಲರೂ ಎರಡು ಡೋಸ್ ಪಡೆದಿದ್ದಾರೆ 15 ರಿಂದ 17 ವರ್ಷ ವಯಸ್ಸಿನವರು 1.40 ಲಕ್ಷ ಜನರಿದ್ದಾರೆ. ಇವರಲ್ಲಿ 1.9 ಲಕ್ಷ ಮಂದಿ ಮೊದಲ ಡೋಸ್ ಪಡೆದುಕೊಂಡಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ರವಿಕುಮಾರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಟಿ.ಕೆ.ಹರೀಶ್ ಮತ್ತಿತರರು ಉಪಸ್ಥಿತರಿದ್ದರು.