ಮನೆ ರಾಷ್ಟ್ರೀಯ ನ್ಯಾಷನಲ್ ಹೆರಾಲ್ಡ್ ಪ್ರಕರಣ: ಇಂದು ಇಡಿ ಮುಂದೆ ವಿಚಾರಣೆಗೆ ಹಾಜರಾಗಲಿರುವ ಸೋನಿಯಾ ಗಾಂಧಿ

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಇಂದು ಇಡಿ ಮುಂದೆ ವಿಚಾರಣೆಗೆ ಹಾಜರಾಗಲಿರುವ ಸೋನಿಯಾ ಗಾಂಧಿ

0

ನವದೆಹಲಿ (New Delhi): ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಇಂದು ಜಾರಿ ನಿರ್ದೇಶನಾಲಯದ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ.

ಜಾರಿ ನಿರ್ದೇಶನಾಲಯ ನೀಡಿದ್ದ ಸಮನ್ಸ್ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧಿನಾಯಕಿ ದೆಹಲಿಯಲ್ಲಿರುವ ಇಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಲಿದ್ದಾರೆ.

75 ವರ್ಷದ ಸೋನಿಯಾ ಗಾಂಧಿ ಅವರು ಜೂನ್ ತಿಂಗಳಲ್ಲಿ ಕೋವಿಡ್ ಮತ್ತು ಶ್ವಾಸಕೋಶದ ಸೋಂಕಿನ ಕಾರಣದಿಂದಾಗಿ ಆಸ್ಪತ್ರೆಗೆ ದಾಖಲಾದ ನಂತರ ಮನೆಯಲ್ಲಿ ವಿಶ್ರಾಂತಿ ಪಡೆಯುವಂತೆ ವೈದ್ಯರು ಕಟ್ಟುನಿಟ್ಟಾಗಿ ಸಲಹೆ ನೀಡಿದ್ದರು. ಜೂನ್ 2 ರಂದು ಸೋನಿಯಾ ಗಾಂಧಿ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿತ್ತು. ನಂತರ ಜೂನ್ 8 ರಂದು ಇಡಿ ಮುಂದೆ ಹಾಜರಾಗಬೇಕಿದ್ದ ಅವರು ವಿಚಾರಣೆಗೆ ಹಾಜರಾಗಲು ಜಾರಿ ನಿರ್ದೇಶನಾಲಯದಿಂದ ಹೆಚ್ಚಿನ ಸಮಯವನ್ನು ಕೋರಿದ್ದರು.

ಬಳಿಕ ಜೂನ್ 12 ರಂದು ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಶಿಲೀಂದ್ರ ಸೋಂಕಿಗೆ ಚಿಕಿತ್ಸೆ ಪಡೆದ ನಂತರ ಅವರು ಆಸ್ಪತ್ರೆಯಿಂದ ಬಿಡುಗಡೆಯಾಗಿ ವೈದ್ಯರ ನಿರ್ದೇಶನದಂತೆ ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದರು. ಅಂತಿಮವಾಗಿ ಇಂದು ವಿಚಾರಣೆಗೆ ಹಾಜರಾಗುತ್ತಿದ್ದಾರೆ. 

ಕಾಂಗ್ರೆಸ್ ಬೃಹತ್ ಪ್ರತಿಭಟನೆ: ಇಡಿ ವಿಚಾರಣೆ ಹೆಸರಿನಲ್ಲಿ ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ತಮ್ಮ ಪ್ರಭಾವದಿಂದ ದುರ್ಬಳಕೆ ಮಾಡಿಕೊಳ್ಳುತ್ತಿದೆ. ತಮ್ಮ ಅಧಿನಾಯಕಿಗೆ ಕಿರುಕುಳ ನೀಡಲಾಗುತ್ತಿದೆ. ಇಡಿ ತನಿಖೆಯ ನೆಪದಲ್ಲಿ ಗಾಂಧಿ ಕುಟುಂಬದ ರಾಜಕೀಯ ವರ್ಚಸ್ಸನ್ನು ತಗ್ಗಿಸುವ ದುರುದ್ದೇಶವಿದು ಎಂದು ವಿಚಾರಣೆಯನ್ನು ಖಂಡಿಸಿ ಕಾಂಗ್ರೆಸ್ ಪಕ್ಷದ ನಾಯಕರು, ಕಾರ್ಯಕರ್ತರು ಇಂದು ದೇಶಾದ್ಯಂತ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.