ಮೈಸೂರು (Mysuru): ಕಳೆದ ಎರಡು ವರ್ಷಗಳು ಕೊರೊನಾ ಹಿನ್ನೆಲೆಯಿಂದ ಸರಳವಾಗಿ ಸ್ವಾತಂತ್ರ‍್ಯ ದಿನಾಚರಣೆಯನ್ನು ಆಚರಿಸಲಾಗಿತ್ತು. ಈ ಬಾರಿ ವಿಜೃಂಭಣೆಯಿಂದ ಅರ್ಥಪೂರ್ಣವಾಗಿ ಸ್ವಾತಂತ್ರ‍್ಯ ದಿನಾಚರಣೆಯನ್ನು ಆಚರಿಸಲಾಗುವುದೆಂದು ಜಿಲ್ಲಾಧಿಕಾರಿಗಳಾದ ಡಾ.ಬಗಾದಿ ಗೌತಮ್ ತಿಳಿಸಿದರು.
ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಡಳಿತ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸ್ವಾತಂತ್ರ್ಯ ದಿನಾಚರಣೆಯ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
ಪ್ರತಿ ವರ್ಷದಂತೆ ಬನ್ನಿಮಂಟಪದಲ್ಲಿ ಕಾರ್ಯಕ್ರಮ ನಡೆಯಲಿದೆ. ಅಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸುವರು. ಪೊಲೀಸ್ ಇಲಾಖೆಯಿಂದ ಆಕರ್ಷಕ ಪಥ ಸಂಚಲನ ಹಾಗೂ ಧ್ವಜ ವಂದನೆ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿಗಳಾದ ಡಾ.ಬಿ.ಎಸ್.ಮಂಜುನಾಥ್‌ಸ್ವಾಮಿ ಅವರು ಮಾತನಾಡಿ, ಸ್ವಾತಂತ್ರ‍್ಯ ದಿನಾಚರಣೆ ಅರ್ಥಪೂರ್ಣ ಆಚರಣೆಗೆ ವಿವಿಧ ಸಮಿತಿಗಳಾದ ಪೆರೇಡ್ ಮತ್ತು ಸಾಂಸ್ಕೃತಿಕ ಉಪಸಮಿತಿ, ಸಾರಿಗೆ ಉಪಸಮಿತಿ, ಸ್ವಾಗತ ಸಮಿತಿ, ಬಹುಮಾನ ಆಯ್ಕೆ ಸಮಿತಿ, ಸನ್ಮಾನ ಉಪಸಮಿತಿ, ಪ್ರಚಾರ ಸಮಿತಿಗಳನ್ನು ರಚಿಸಲಾಗಿದೆ ಈ ಬಾರಿಯೂ ಪ್ಲಾಸ್ಟಿಕ್ ಧ್ವಜಗಳನ್ನು ನಿಷೇಧಿಸಲಾಗಿದೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಮುಡಾ ಆಯುಕ್ತರಾದ ಲಕ್ಷ್ಮಿಕಾಂತ ರೆಡ್ಡಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.