ಮನೆ ರಾಜ್ಯ 3 ದಿನ ಕರ್ನಾಟಕ, ತಮಿಳುನಾಡು, ಕೇರಳದಲ್ಲಿ ಭಾರಿ ಮಳೆ

3 ದಿನ ಕರ್ನಾಟಕ, ತಮಿಳುನಾಡು, ಕೇರಳದಲ್ಲಿ ಭಾರಿ ಮಳೆ

0
https://www.youtube.com/channel/UCmDoYGj_oDaxpT_t7Pa9iEQ

ತಿರುವನಂತಪುರಂ (Thiruvananthapuram): ಮುಂದಿನ ಮೂರು ದಿನಗಳವರೆಗೆ ಕರ್ನಾಟಕ, ತಮಿಳುನಾಡು ಮತ್ತು ಕೇರಳದಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ಬಂಗಾಳಕೊಲ್ಲಿಯ ತಮಿಳುನಾಡು ಕರಾವಳಿ ಭಾಗದಲ್ಲಿ ಚಂಡಮಾರುತ ಬೀಸುತ್ತಿರುವುದೇ ಮಳೆ ಹೆಚ್ಚಾಗಲು ಕಾರಣ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

ಈ ಮಧ್ಯೆ, ಪತ್ತನಂತಿಟ್ಟ, ಅಲಪ್ಪುಳ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ, ತ್ರಿಶೂರ್, ಪಾಲಕ್ಕಾಡ್ ಮತ್ತು ಕಣ್ಣೂರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್‌ ಘೋಷಿಸಲಾಗಿದೆ. ಕೊಲ್ಲಂ, ಮಲಪ್ಪುರಂ, ಕೋಯಿಕ್ಕೋಡ್, ವಯನಾಡು ಮತ್ತು ಕಾಸರಗೋಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಿದೆ.

ಕೇರಳದಲ್ಲಿ ಎಡಬಿಡದೆ ಮಳೆ ಸುರಿಯುತ್ತಿರುವುದರಿಂದಾಗಿ ಪೆರಿಂಗಲ್ಕುತ್ತು ಅಣೆಕಟ್ಟಿನ ನಾಲ್ಕನೇ ಷಟರ್ ಅನ್ನು ತೆರೆಯಲಾಗಿದೆ. ಇದರ ಪರಿಣಾಮವಾಗಿ ಚಾಲಕುಡಿ ನದಿಯ ನೀರಿನ ಮಟ್ಟ ಏರಿಕೆಯಾಗಿದ್ದು, ಅಧಿಕಾರಿಗಳು ನದಿ ತೀರದಲ್ಲಿ ವಾಸಿಸುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುತ್ತಿದ್ದಾರೆ. ಕೊಟ್ಟಾಯಂ ಜಿಲ್ಲೆಯಲ್ಲಿ ರಸ್ತೆಗಳಿಗೆ ನೀರು ನುಗ್ಗಿರುವ ಬಗ್ಗೆ ವರದಿಯಾಗಿದೆ.

ಪ್ರತಿಕೂಲ ಹವಾಮಾನದ ಕಾರಣದಿಂದ ಅಲಪ್ಪುಳ, ಇಡುಕ್ಕಿ, ಪತ್ತನಂತಿಟ್ಟ, ಎರ್ನಾಕುಲಂ ಮತ್ತು ಕೊಟ್ಟಾಯಂನಲ್ಲಿ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ. ಮಹಾತ್ಮ ಗಾಂಧಿ ವಿಶ್ವವಿದ್ಯಾಲಯವು ಗುರುವಾರ ನಡೆಯಬೇಕಿದ್ದ ಎಲ್ಲಾ ಪರೀಕ್ಷೆಗಳನ್ನು ಮುಂದೂಡಿದೆ.

ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ  ಭೂಕುಸಿತ ಪೀಡಿತ ಎತ್ತರದ ಶ್ರೇಣಿಗಳು, ನದಿ ದಡಗಳು, ತಗ್ಗು ಪ್ರದೇಶಗಳಲ್ಲಿ ಹೈ ಅಲರ್ಟ್ ಘೋಷಿಸಿದೆ. ಆಗಸ್ಟ್ 4 ರವರೆಗೆ ಅಲೆಗಳು 3.3 ಮೀಟರ್ ಎತ್ತರಕ್ಕೇರುವ ಸಾಧ್ಯತೆಯಿರುವುದರಿಂದ ನದಿ ತೀರಗಳಲ್ಲಿ ರಾತ್ರಿ ಪ್ರಯಾಣ ಮಾಡದಂತೆ ಮತ್ತು ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ.

ಆಗಸ್ಟ್ 6 ರಿಂದ ಗುಜರಾತ್, ಪೂರ್ವ ರಾಜಸ್ಥಾನ, ಮಹಾರಾಷ್ಟ್ರ, ಗೋವಾ, ತೆಲಂಗಾಣ, ಛತ್ತೀಸ್‌ಗಢ, ಮಧ್ಯಪ್ರದೇಶ ಮತ್ತು ಒಡಿಶಾದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ.