ಮನೆ ಸುದ್ದಿ ಜಾಲ ಅರ್ಥಪೂರ್ಣವಾಗಿ ಡಿ.ದೇವರಾಜ ಅರಸು ಅವರ ಜನ್ಮದಿನ ಆಚರಣೆ: ಡಾ.ಬಗಾದಿ ಗೌತಮ್

ಅರ್ಥಪೂರ್ಣವಾಗಿ ಡಿ.ದೇವರಾಜ ಅರಸು ಅವರ ಜನ್ಮದಿನ ಆಚರಣೆ: ಡಾ.ಬಗಾದಿ ಗೌತಮ್

0

ಮೈಸೂರು (Mysuru): ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸು ಅವರ ಜನ್ಮ ದಿನಾಚರಣೆಯನ್ನು ಜಿಲ್ಲಾ ಮಟ್ಟದಲ್ಲಿ ಆಗಸ್ಟ್ 20 ರಿಂದ ಆಗಸ್ಟ್ 22 ರವರೆಗೆ 3 ದಿನಗಳ ಕಾಲ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿಗಳಾದ ಡಾ.ಬಗಾದಿ ಗೌತಮ್ ತಿಳಿಸಿದರು.

ಇಂದು ಜಿಲ್ಲಾಧಿಕಾರಿಗಳ ಕಚೇಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಕೆಳೆದ 2 ವರ್ಷಗಳು ಕೋವಿಡ್ ಹಿನ್ನೆಲೆ ಸರಳವಾಗಿ ಅರಸು ಅವರ ಜನ್ಮದಿನ ಆಚರಿಸಲಾಗಿತ್ತು. ಈ ಬಾರಿ ವಿಜೃಂಭಣೆಯಿಂದ ಅರ್ಥಪೂರ್ಣವಾಗಿ ಆಚರಿಸಲಾಗುವುದು. ಅಧಿಕಾರಿಗಳು ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಹಿಂದುಳಿದ ವರ್ಗಗಳ ಜಿಲ್ಲಾ ಅಧಿಕಾರಿಗಳಾದ ಬಿಂದ್ಯಾ ಅವರು ಮಾತನಾಡಿ, ಆಗಸ್ಟ್ 20 ರಂದು ಕಲಾಮಂದಿರದಲ್ಲಿ ವೇದಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು. ಅಂದು ಜಿಲ್ಲಾ ಮಟ್ಟದ ಪ್ರಶಸ್ತಿ ಪ್ರದಾನ ಹಾಗೂ ಹಿಂದುಳಿದ ವರ್ಗಗಳ ವಿವಿಧ ಕಾಯಕ ಸಮುದಾಯದವರಾದ ಬಡಗಿ, ನೇಕಾರ, ಕಮ್ಮಾರ, ಕುಂಬಾರ, ವಿಶ್ವಕರ್ಮ, ಇತ್ಯಾದಿ ಕುಲಕಸುಬುದಾರರು ತಯಾರಿಸಿರುವ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ವ್ಯವಸ್ಥೆ ಮಾಡಲಾಗುವುದು ಎಂದು ಅವರು ತಿಳಿಸಿದರು.

ಆಗಸ್ಟ್ 21 ರಂದು ಜಿಲ್ಲಾ ಮಟ್ಟದಲ್ಲಿ ಶಾಲಾ/ಕಾಲೇಜು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗುವುದು. ವಿದ್ಯಾರ್ಥಿ ನಿಲಯಗಳ ಮಕ್ಕಳಿಗೆ ಯೋಗ ಹಾಗೂ ವಿವಿಧ ಕ್ರೀಡೆಗಳ ಸ್ಪರ್ಧೆಯನ್ನು ಏರ್ಪಡಿಸಿ ಬಹುಮಾನ ವಿತರಿಸಲಾಗುವುದು. ಆಗಸ್ಟ್ 22 ರಂದು ಶಾಲಾ ಮಕ್ಕಳಿಗೆ ಅರಣ್ಯದ ಮಹತ್ವದ ಬಗ್ಗೆ ತಿಳವಳಿಕೆ ಮತ್ತು ಗಿಡ ನೆಡುವ ಕಾರ್ಯಕ್ರಮವನ್ನು ಹಾಗೂ ಛಾಯಾಚಿತ್ರ ಪ್ರದರ್ಶನವನ್ನು ಆಯೋಜಿಸಲಾಗುವುದು ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಡಾ.ಮಂಜುನಾಥಸ್ವಾಮಿ, ಉಪ ವಿಭಾಗಾಧಿಕಾರಿಗಳಾದ ಕಮಲಾಭಾಯಿ, ಸೇರಿದಂತೆ ಅರಸು ಮಂಡಳಿ ಸಂಘ, ಅರಸು ಚಿಂತಕರ ಛಾವಡಿ, ಅರಸು ಮಹಿಳಾ ಜಾಗೃತಿ ಸಭಾ ಟ್ರಸ್ಟ್, ಕರ್ನಾಟಕ ರಾಜ್ಯ ಅರಸು ಸಂಘ, ಮಡಿವಾಳರ ಸಂಘ, ಸವಿತಾ ಸಮಾಜ ಸಂಘ, ಉಪ್ಪಾರರ ಸಂಘ, ಗಾಣಿಗರ ಸಂಘ, ದೊಂಭಿದಾಸರ ಸಂಘ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಅಲೆಮಾರಿ/ಅರೆ ಅಲೆಮಾರಿ ಜನಾಂಗಗಳ ಬುಡಕಟ್ಟು ಸಮುದಾಯಗಳ ವೇದಿಕೆ, ಯಾದವ ಸಂಘ ಹಾಗೂ ಜೈಭೀಮ್ ವಾಯ್ಸ್ ಸಂಘಗಳ ಅದ್ಯಕ್ಷರುಗಳು ಹಾಗೂ ಸಮುದಾಯದ ಮುಖಂಡರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.