ನವದೆಹಲಿ (New Delhi): ದೇಶವು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮದಲ್ಲಿದೆ. ‘ಪ್ರತಿ ಮನೆಗೂ ತ್ರಿವರ್ಣ ಧ್ವಜ’ ಅಭಿಯಾನದಿಂದಾಗಿ, ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ದೇಶದೆಲ್ಲೆಡೆ ತ್ರಿವರ್ಣ ಧ್ವಜ ರಾರಾಜಿಸುತ್ತಿದೆ.
ಇಂದು ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ತ್ರಿವರ್ಣ ಧ್ವಜಾರೋಹಣ ನೆರವೇರಿಸಿದರು. ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಸತತ 9ನೇ ಬಾರಿಗೆ ತ್ರಿವರ್ಣ ಧ್ವಜಾರೋಹಣ ಮಾಡಿದ್ದಾರೆ. ಹಿರಿಯ ಸಚಿವರು, ಅಧಿಕಾರಿಗಳು ಮತ್ತು ಲಕ್ಷಾಂತರ ಪ್ರೇಕ್ಷಕರ ಉಪಸ್ಥಿತಿಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ ನೆರವೇರಿಸಿದರು.
ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಂತೆಯೇ ಭಾರತೀಯ ಸೇನೆಯ ವಿಶೇಷ ಪಡೆಗಳಿಂದ ಅವರು ಗಾರ್ಡ್ ಆಫ್ ಹಾನರ್ ಸ್ವೀಕರಿಸಿದರು. ಬಳಿಕ ಪ್ರಧಾನಿ ಮೋದಿ ಧ್ವಜಾರೋಹಣ ನೆರವೇರಿಸುತ್ತಲೇ ವಾಯುಸೇನೆಯ ಹೆಲಿಕಾಪ್ಟರ್ ಗಳಿಂದ ಧ್ವಜಕ್ಕೆ ಪುಷ್ಪವೃಷ್ಟಿ ಸುರಿಸಿ ಗೌರವ ಸಲ್ಲಿಸಲಾಯಿತು.
ಧ್ವಜಾರೋಹಣಕ್ಕೂ ಮುನ್ನ ಪ್ರಧಾನಿ ಮೋದಿ ಅವರು ರಾಷ್ಟ್ರಪಿತ ಮಹಾತ್ಮಾಗಾಂಧಿ ಅವರ ಸ್ಮಾರಕ ರಾಜ್ ಘಾಟ್ ಗೆ ತೆರಳಿ ಪುಷ್ಪನಮನ ಸಲ್ಲಿಸಿದರು.
ಸ್ವಾತಂತ್ರ್ಯೋತ್ಸವದ ಸಂಭ್ರಮಾಚರಣೆಯ ಭಾಗವಾಗಿ ಕೇಂದ್ರ ಸರ್ಕಾರವು ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವಜ ಹಾರಿಸುವುದು ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಪ್ರಧಾನಿ ಮೋದಿ ಅವರು ಸ್ವಾತಂತ್ರ್ಯ ಭಾಷಣದಲ್ಲೇ ಸರ್ಕಾರದ ಪ್ರಮುಖ ಯೋಜನೆಗಳನ್ನು ಘೋಷಿಸುತ್ತಾರೆ. ಕಳೆದ ವರ್ಷ ಅವರು ರಾಷ್ಟ್ರೀಯ ‘ಹೈಡ್ರೋಜನ್ ಮಿಷನ್’, ‘ಗತಿ ಶಕ್ತಿ ಮಾಸ್ಟರ್ ಪ್ಲ್ಯಾನ್’ ಇತ್ಯಾದಿ ಯೋಜನೆಗಳನ್ನು ಘೋಷಿಸಿದ್ದರು.