ಮೈಸೂರು(Mysuru): ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಆನೆಗಳು , ಕುದುರೆಗಳ ಸಮ್ಮುಖದಲ್ಲಿ ಫಿರಂಗಿ ಸಿಡಿಸಿ ತಾಲೀಮು ನಡೆಸುವ ಪ್ರಕ್ರಿಯೆಗೆ ಚಾಲನೆ ನೀಡುವ ಸಲುವಾಗಿ ಫಿರಂಗಿ ಗಾಡಿಗಳಿಗೆ ಸಚಿವ ಎಸ್.ಟಿ.ಸೋಮಶೇಖರ್ ಪೂಜೆ ಸಲ್ಲಿಸಿದರು
ಫಿರಂಗಿಗಾಡಿಗಳಿಗೆ ಸಂಪ್ರದಾಯದಂತೆ ಅರಮನೆ ಆವರಣದಲ್ಲಿ ಇಂದು ಮಧ್ಯಾಹ್ನ ಕುಂಬಳಕಾಯಿ ಒಡೆಯುವ ಮೂಲಕ ಪೂಜೆ ಸಲ್ಲಿಸಿದರು.
ಈ ಸಂದರ್ಭ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ, ಡಿಸಿಪಿ ಗೀತಾ ಪ್ರಸನ್ನ ಎಂ.ಎಸ್ ಮತ್ತಿತರರು ಉಪಸ್ಥಿತರಿದ್ದರು.
11ಫಿರಂಗಿ ಗಾಡಿಗಳಿಗೆ ಪೂಜೆ ಸಲ್ಲಿಕೆಯಾಗಿದ್ದು ಸೆಪ್ಟೆಂಬರ್ ಮೊದಲ ವಾರದಲ್ಲಿ ಆನೆಗಳು, ಕುದುರೆಗಳ ಸಮ್ಮುಖದಲ್ಲಿ ಸಿಡಿಮದ್ದು ಸಿಡಿಸಿ ತಾಲೀಮು ನಡೆಸಲಾಗುತ್ತದೆ.
ವಿಜಯದಶಮಿಯಂದು ಅರಮನೆ ಬಳಿ ಪೊಲೀಸರು 21ಬಾರಿ ಕುಶಾಲತೋಪು ಸಿಡಿಸುವ ಮೂಲಕ ಗೌರವ ಸಲ್ಲಿಸುತ್ತಾರೆ. ಆ ಸದ್ದಿಗೆ ಆನೆಗಳು, ಕುದುರೆಗಳು ಬೆದರದೆ, ವಿಚಲಿತಗೊಳ್ಳದೆ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲಿ ಎಂಬ ಉದ್ದೇಶದಿಂದ ದಸರಾ ಆರಂಭಕ್ಕೂ ಮುನ್ನ ಫಿರಂಗಿಗಳ ಮೂಲಕ ಸಿಡಿಮದ್ದು ಸಿಡಿಸಿ ತಾಲೀಮು ನಡೆಸಲಾಗುತ್ತದೆ.