ಮನೆ ರಾಜ್ಯ ಸೆ.6 ರಂದು ರಾಜ್ಯ ಸರ್ಕಾರಿ ನೌಕರರ ದಿನಾಚರಣೆ

ಸೆ.6 ರಂದು ರಾಜ್ಯ ಸರ್ಕಾರಿ ನೌಕರರ ದಿನಾಚರಣೆ

0

ಬೆಂಗಳೂರು(Bengaluru): ಪ್ರಪ್ರಥಮ ಬಾರಿಗೆ ರಾಜ್ಯ ಸರ್ಕಾರದ ವತಿಯಿಂದ ಸರ್ಕಾರಿ ನೌಕರರ ದಿನಾಚರಣೆಯನ್ನು ಸೆಪ್ಟೆಂಬರ್ 6 ರಂದು ಆಯೋಜಿಸಲಾಗಿದೆ.

ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರಿ ಸೇವೆಯಲ್ಲಿ ಅನುಪಮ ಸೇವೆ ಸಲ್ಲಿಸಿರುವ 30 ಸರ್ಕಾರಿ ಅಧಿಕಾರಿ ಮತ್ತು ನೌಕರರಿಗೆ ಇದೇ ಸಂದರ್ಭದಲ್ಲಿ 2022 ನೇ ಸಾಲಿನ ರಾಜ್ಯ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಆಡಳಿತ ಸುಧಾರಣಾ ವಿಭಾಗದ ಸರ್ಕಾರದ ಪ್ರಧಾನ ಕಾರ್ಯದರ್ಶಿ ಶ್ರೀವತ್ಸ ಕೃಷ್ಣ ಪ್ರಕಟಿಸಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಕಾರ್ಯಕ್ರಮ ಆಯೋಜಿಸಿದ್ದು, ಅಂದು ಬೆಳಿಗ್ಗೆ 11-00 ಗಂಟೆಗೆ ವಿಧಾನಸೌಧದ ಔತಣ ಸಭಾಂಗಣದಲ್ಲಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಸಮಾರಂಭ ಉದ್ಘಾಟಿಸಲಿದ್ದಾರೆ. ಹಾಗೂ ಸರ್ಕಾರಿ ಅಧಿಕಾರಿ ಮತ್ತು ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಈ ಸಮಾರಂಭಕ್ಕೆ ಹಾಜರಾಗುವ ಸರ್ಕಾರಿ ನೌಕರರಿಗೆ ಅರ್ಧ ದಿನದ ವಿಶೇಷ ಸಾಂದರ್ಭಿಕ ರಜೆಯ ಸೌಲಭ್ಯವನ್ನೂ ಕಲ್ಪಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.