ಮನೆ ಭಾಷೆ ಕನ್ನಡ ಕಡ್ಡಾಯಗೊಳಿಸಲು ಕಾನೂನಿನ ಬಲ: ಸಿಎಂ ಬೊಮ್ಮಾಯಿ

ಕನ್ನಡ ಕಡ್ಡಾಯಗೊಳಿಸಲು ಕಾನೂನಿನ ಬಲ: ಸಿಎಂ ಬೊಮ್ಮಾಯಿ

0

ಬೆಂಗಳೂರು(Bengaluru): ಇದೇ ಮೊದಲ ಬಾರಿಗೆ ಎಲ್ಲಾ ಹಂತಗಳಲ್ಲಿ ಕನ್ನಡ ಕಡ್ಡಾಯಗೊಳಿಸಲು ಕಾನೂನಿನ ಬಲ ನೀಡಲು ಅಧಿವೇಶನದಲ್ಲಿ ಮಸೂದೆಯೊಂದನ್ನು ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಮಾತನಾಡಿದ ಅವರು, ಕಾನೂನಿನ ಮೂಲಕ ಕನ್ನಡ ಭಾಷೆ ಮತ್ತು ಕನ್ನಡದ ಜನರಿಗೆ ರಕ್ಷಣೆ ನೀಡುವ ಕೆಲಸ ಮಾಡುತ್ತಿದ್ದೇವೆ. ರಾಜ್ಯದಲ್ಲಿ ನೆಲೆಸಿರುವ ಅನ್ಯಭಾಷಿಕರು ಕನ್ನಡ ಕಲಿತುಕೊಳ್ಳಲು ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

ಭಾರತ ಒಂದು ಒಕ್ಕೂಟ ರಾಷ್ಟ್ರ. ಅನೇಕ ಭಾಷೆಗಳು ಮತ್ತು ಸಂಸ್ಕೃತಿಗಳನ್ನು ಒಳಗೊಂಡ ದೇಶ. ಎಲ್ಲ ಮಾತೃಭಾಷೆಗಳೂ ರಾಷ್ಟ್ರೀಯ ಭಾಷೆಗಳೇ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಕನ್ನಡದ ರಕ್ಷಣೆ ಮತ್ತು ಬೆಳವಣಿಗೆಗೆ ಸರ್ಕಾರ ಸದಾ ಬದ್ಧವಾಗಿದೆ. ಈ ವಿಚಾರದಲ್ಲಿ ನಾವು ರಾಜೀ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ನೆಲ, ಜಲ ಮತ್ತು ಭಾಷೆಯ ವಿಚಾರದಲ್ಲಿ ರಾಜಕೀಯವನ್ನು ಮೀರಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ರಾಜ್ಯದಲ್ಲಿ ಕನ್ನಡ ಅಗ್ರಮಾನ್ಯ ಭಾಷೆಯಾಗಿ ಬಳಕೆ ಆಗುತ್ತದೆ ಎಂದು ಬೊಮ್ಮಾಯಿ ಹೇಳಿದರು.

ಹೊಸ ಶಿಕ್ಷಣ ನೀತಿಯಲ್ಲಿ ಆಯಾಯ ರಾಜ್ಯ ಭಾಷೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ನಮ್ಮ ರಾಜ್ಯದಲ್ಲಿ ಕನ್ನಡದಲ್ಲಿ ಎಂಜಿನಿಯರಿಂಗ್‌ ಕೋರ್ಸ್‌ ನಡೆಸಲಾಗುತ್ತದೆ. ಮೊದಲ ಬ್ಯಾಚ್‌ನ ಮೊದಲ ಸೆಮಿಸ್ಟರ್‌ ಪರೀಕ್ಷೆ ಕನ್ನಡದಲ್ಲಿಯೇ ನಡೆದಿದೆ ಎಂದು  ತಿಳಿಸಿದರು.

ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ, ಹಿಂದಿಯನ್ನು ಬಲವಂತವಾಗಿ ಹೇರುವುದನ್ನು ವಿರೋಧಿಸುತ್ತೇವೆ. ಈ ಸಂಬಂಧ ಕೇಂದ್ರಕ್ಕೆ ಮನವಿ ಸಲ್ಲಿಸಬೇಕು ಆಗ್ರಹಿಸಿದರು.