ಮನೆ ರಾಜಕೀಯ ಬಿ.ಎಸ್.ಯಡಿಯೂರಪ್ಪ ಅವರು ಮೀಸಲಾತಿಗೆ ವಿರೋಧ ವ್ಯಕ್ತಪಡಿಸಿಲ್ಲ: ಬಿ.ವೈ.ವಿಜಯೇಂದ್ರ

ಬಿ.ಎಸ್.ಯಡಿಯೂರಪ್ಪ ಅವರು ಮೀಸಲಾತಿಗೆ ವಿರೋಧ ವ್ಯಕ್ತಪಡಿಸಿಲ್ಲ: ಬಿ.ವೈ.ವಿಜಯೇಂದ್ರ

0

ಮೈಸೂರು(Mysuru): ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಲಿಂಗಾಯತ ಪಂಚಮಸಾಲಿ ಮೀಸಲಾತಿಗೆ ವಿರೋಧ ವ್ಯಕ್ತಪಡಿಸಿಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮೇಲೆ ಒತ್ತಡವನ್ನೂ ಹೇರಿಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಪಷ್ಟನೆ ನೀಡಿದರು.

ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ತಂದೆ ನನ್ನನ್ನು ಲಿಂಗಾಯತ ಪಂಚಮಸಾಲಿ ಸಮಾಜದ ವಿರೋಧಿಗಳು ಎಂದು ಬಿಂಬಿಸುವ ಯತ್ನವನ್ನು ಕೆಲವರು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಪಂಚಮಸಾಲಿ ಸಮಾಜಕ್ಕೆ ಹಿಂದುಳಿದ ವರ್ಗ 2ಎ ಮೀಸಲಾತಿ ಸಿಗಲು ಯಡಿಯೂರಪ್ಪ ವಿರೋಧಿಸುತ್ತಿದ್ದಾರೆ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಯಾರೋ ರಾಜಕೀಯ ಕಾರಣಕ್ಕೆ ಸ್ವಾಮೀಜಿಯವರ ಮನಸ್ಸು ಕೆಡಿಸಿದ್ದಾರೆ.  ತಂದೆ ಯಡಿಯೂರಪ್ಪ ಮತ್ತು ನನ್ನ ಹೆಸರನ್ನು ಈ ವಿಚಾರದಲ್ಲಿ ಪದೇ ಪದೇ ಎಳೆದು ತರಲಾಗುತ್ತಿದೆ ಎಂದು ಹೇಳಿದರು.

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುತ್ತೇನೆಯೋ, ಇಲ್ಲವೋ ಗೊತ್ತಿಲ್ಲ. ಅದನ್ನು ಹೈಕಮಾಂಡ್‌ ನಿರ್ಧರಿಸುತ್ತದೆ. ಆದರೆ, ನಾನು ಯಾವುದೇ ಕ್ಷೇತ್ರದಲ್ಲೇ ಸ್ಪರ್ಧಿಸಿದರೂ, ಯಾವುದೇ ಹಂತಕ್ಕೆ ಬೆಳೆದರೂ ವರುಣ ಕ್ಷೇತ್ರದವರು ಸೇರಿದಂತೆ ಹಳೇ ಮೈಸೂರು ಭಾಗದ ಜನರ ಪ್ರೀತಿ–ವಿಶ್ವಾಸವನ್ನು ಎಂದಿಗೂ ಮರೆಯುವುದಿಲ್ಲ. ನನಗೆ ರಾಜಕೀಯವಾಗಿ ಶಕ್ತಿ ಕೊಟ್ಟಿದ್ದೇ ಈ ಪ್ರದೇಶ. ಆದ್ದರಿಂದ ಇಲ್ಲಿ ಪಕ್ಷ ಸಂಘಟನೆಯಲ್ಲಿ ನಿರಂತರವಾಗಿ ತೊಡಗುತ್ತೇನೆ ಎಂದು ಪ್ರತಿಕ್ರಿಯಿಸಿದರು.

ಶಿವಮೊಗ್ಗದಲ್ಲಿ ಉಗ್ರರ ಬಂಧನದ ಕುರಿತು ಪ್ರತಿಕ್ರಿಯಿಸಿದ ಅವರು, ವಿದ್ಯಾವಂತರು ಐಸಿಸ್ ಸಂಘಟನೆಯೊಂದಿಗೆ ನಂಟು ಹೊಂದಿರುವುದು ಆತಂಕಕಾರಿ ಬೆಳವಣಿಗೆ.ಶಿವಮೊಗ್ಗ ಮಾತ್ರವಲ್ಲ, ದಕ್ಷಿಣ ಕನ್ನಡದಲ್ಲೂ ಇಂತಹ ಬೆಳವಣಿಗೆ ಕಂಡುಬಂದಿದೆ. ಎಂಜಿನಿಯರಿಂಗ್ ಸೇರಿದಂತೆ ಉತ್ತಮ ವಿದ್ಯಾಭ್ಯಾಸ ಹೊಂದಿದವರು ಐಸಿಸ್ ಸಂಪರ್ಕ ಹೊಂದಿರುವುದು ಗೊತ್ತಾಗಿದೆ. ಕರ್ನಾಟಕವು ಕುವೆಂಪು ಹೇಳಿದಂತೆ ಸರ್ವ ಜನಾಂಗದ ಶಾಂತಿಯ ತೋಟ. ಈ ಶಾಂತಿಯ ವಾತಾವರಣ ಹಾಳು ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದರು.