ಚೆನ್ನೈ: ಚೆನ್ನೈನಲ್ಲಿರುವ ಬಿಜೆಪಿ ಕಚೇರಿ ಮೇಲೆ ಅಪರಿಚಿತ ವ್ಯಕ್ತಿಯೋರ್ವ ಇಂದು ಬೆಳಗ್ಗಿನ ಜಾವ ಪೆಟ್ರೋಲ್ ಬಾಂಬ್ ಎಸೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಘಟನೆ ಕುರಿತು ಮಾಹಿತಿ ಲಭ್ಯವಾದ ಕೂಡಲೇ ಮಾಂಬಲಂ ಠಾಣೆ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ವಿನೋತ್ ಎಂಬ ಆರೋಪಿಯನ್ನು ಬಂಧಿಸಲಾಗಿದ್ದು, ಆತನನ್ನು ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಪ್ರಕರಣದ ಎನ್‌ಐಎ ತನಿಖೆಗೆ ಆಗ್ರಹಿಸಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗುತ್ತಿದೆ. ಈ ಪ್ರಕರಣದ ಹಿಂದಿರುವ ಪಿತೂರಿ ಹಾಗು ಸತ್ಯ ಸಂಗತಿ ಎನ್‌ಐಎ ತನಿಖೆಯಿಂದ ಮಾತ್ರ ಹೊರಬರಲು ಸಾಧ್ಯ ಎಂದು ಅವರು ಹೇಳಿದ್ದಾರೆ.
ಆರೋಪಿ ವಿನೋತ್ ಈಗಾಗಲೇ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದು, ನೀಟ್ ಪರೀಕ್ಷೆಗೆ ವಿರೋಧ ವ್ಯಕ್ತಪಡಿಸಿ ಪೆಟ್ರೋಲ್ ಬಾಂಬ್ ಎಸೆದಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ