ಕಳೆದ ಲೋಕಸಭೆ ಚುನಾವಣೆ ವೇಳೆ ಪ್ರಜ್ವಲ್ ರೇವಣ್ಣ ಅವರು ನಾಮಪತ್ರ ಸಲ್ಲಿಸುವಾಗ ಪೂರ್ಣ ಪ್ರಮಾಣದಲ್ಲಿ ಆಸ್ತಿ ವಿವರ ಘೋಷಿಸಿಲ್ಲ. ನೈಜ ಆದಾಯ ಬಚ್ಚಿಟ್ಟು ಸುಳ್ಳು ಅಫಿಡವಿಟ್ ಸಲ್ಲಿಸಿ ಲೋಕಸಭಾ ಚುನಾವಣೆಯಲ್ಲಿ ಹಾಸನ ಸಂಸತ್ ಕ್ಷೇತ್ರದಿಂದ ಗೆದ್ದಿರುವ ಪ್ರಜ್ವಲ್ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಕೋರಿರುವ ಅರ್ಜಿಗೆ ಸಂಬಂಧಿಸಿದ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಕರ್ನಾಟಕ ಹೈಕೋರ್ಟ್ನಲ್ಲಿ ಮಂಗಳವಾರ ವಿಚಾರಣೆ ಎದುರಿಸಿದರು.
ಬಿಜೆಪಿಯ ಪರಾಜಿತ ಅಭ್ಯರ್ಥಿ ಎ ಮಂಜು ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಕೆ ನಟರಾಜನ್ ಅವರಿದ್ದ ಏಕಸದಸ್ಯ ವಿಚಾರಣೆ ನಡೆಸಿತು.
ಈ ವೇಳೆ ಕಟಕಟೆಯಲ್ಲಿ ನಿಂತು ಪ್ರಮಾಣ ಮಾಡಿ ವಿಚಾರಣೆ ಎದುರಿಸಿದ ಪ್ರಜ್ವಲ್ ರೇವಣ್ಣ ಅವರು ಹಿರಿಯ ವಕೀಲ ಉದಯ ಹೊಳ್ಳ ಮತ್ತು ಕೇಶವ ರೆಡ್ಡಿ ಅವರ ಪ್ರಶ್ನೆಗಳಿಗೆ ಉತ್ತರಿಸಿದರು. ಇದನ್ನು ದಾಖಲಿಸಿಕೊಂಡ ಪೀಠವು ವಿಚಾರಣೆಯನ್ನು ಇದೇ 15ಕ್ಕೆ ಮುಂದೂಡಿದೆ.