ಹೊಸಪೇಟೆ(Hospete): ಬೆಳೆಹಾನಿ ಕುರಿತು 13 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ವಿಡಿಯೊ ಕಾನ್ಫರೆನ್ಸ್ ನಡೆಸಿದರು.
ತಾಲ್ಲೂಕಿನ ಕಮಲಾಪುರದ ಖಾಸಗಿ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿರುವ ಅವರು ಗುರುವಾರ ಬೆಳಿಗ್ಗೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರೊಂದಿಗೆ ಸಭೆ ನಡೆಸಿದರು.
ಅಕ್ಟೋಬರ್ ತಿಂಗಳಲ್ಲಿ ಮಳೆಯಿಂದ ಆಗಿರುವ ಹಾನಿ ಕುರಿತು ಜಂಟಿ ಸಮೀಕ್ಷೆ ನಡೆಸಿ, ತಿಂಗಳೊಳಗೆ ಪರಿಹಾರ ವಿತರಿಸಬೇಕೆಂದು ಸೂಚನೆ ಕೊಟ್ಟರು. ಮನೆಗಳ ಹಾನಿ ದಾಖಲಿಸುವಾಗ ಯಾವುದೇ ಲೋಪವಾಗದಂತೆ ಜಿಲ್ಲಾಧಿಕಾರಿಗಳು ಖುದ್ದು ಮೇಲ್ವಿಚಾರಣೆ ವಹಿಸಬೇಕು. ಹೆಚ್ಚುವರಿ ಪರಿಹಾರ ವಿತರಣೆಗೆ ಸುತ್ತೋಲೆ ಹೊರಡಿಸಲು ವಿಪತ್ತು ನಿರ್ವಹಣೆ ಆಯುಕ್ತರಿಗೆ ನಿರ್ದೇಶನ ಕೊಡಲಾಗಿದೆ ಎಂದು ತಿಳಿಸಿದರು.
ಮಳೆಗೆ ಕೆರೆಗಳು ಒಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು. ಮೂಲಸೌಕರ್ಯ ಹಾನಿಗೆ ಸಂಬಂಧಿಸಿ ಅದರ ತೀವ್ರತೆ ಆಧರಿಸಿ ಎನ್. ಡಿ.ಆರ್.ಎಫ್. ಮಾರ್ಗಸೂಚಿ ಅನ್ವಯ ದುರಸ್ತಿ, ಹೆಚ್ಚುವರಿ ನೆರವು ಅಗತ್ಯವಿರುವ ಕಾಮಗಾರಿಗಳು, ಸಂಪೂರ್ಣ ಪುನರ್ ನಿರ್ಮಾಣದ ಕಾಮಗಾರಿಗಳು ಯಾವುದೆಂದು ಗುರುತಿಸಿ ದುರಸ್ತಿ, ಮರು ನಿರ್ಮಾಣಕ್ಕೆ ಕ್ರಮ ಜರುಗಿಸಬೇಕೆಂದು ಸೂಚಿಸಿದರು.
ಸೇತುವೆಗಳ ದುರಸ್ತಿ, ಅಗತ್ಯವಿದ್ದರೆ ಮರು ನಿರ್ಮಾಣ ಮಾಡಬೇಕು. ವಿದ್ಯುತ್ ಕಂಬ, ಟ್ರಾನ್ಸಫಾರ್ಮರ್ ಗಳನ್ನು 24 ಗಂಟೆಯೊಳಗೆ ಸರಿಪಡಿಸಿ ವಿದ್ಯುತ್ ಸಂಪರ್ಕ ಕಲ್ಪಿಸಬೇಕು. ಹೊಳೆ, ಹಳ್ಳಗಳ ವ್ಯಾಪ್ತಿಯಲ್ಲಿ ಎಲ್ಲ ರೀತಿಯ ಮುನ್ನೆಚ್ಚರಿಕೆ ವಹಿಸಬೇಕು ಎಂದೂ ತಿಳಿಸಿದರು.
ಸಚಿವೆ ಶಶಿಕಲಾ ಅಣ್ಣಾಸಾಹೇಬ್ ಜೊಲ್ಲೆ, ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಪಿ., ಜಿಪಂ ಸಿಇಒ ಹರ್ಷಲ್ ಭೋಯರ್, ಎಸ್ಪಿ ಡಾ. ಅರುಣ್ ಕೆ., ಉಪವಿಭಾಗಾಧಿಕಾರಿ ಸಿದ್ದರಾಮೇಶ್ವರ ಇದ್ದರು.