ದೇವನಹಳ್ಳಿ(Devanahalli): ನ.11ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದ ಪ್ರಯಾಣಿಕರಿಗೆ ಹಾಗೂ ಸಂಚಾರ ವ್ಯವಸ್ಥೆಗೆ ಯಾವುದೇ ತೊಡಕು ಆಗದಂತೆ ಕಾರ್ಯಕ್ರಮ ಆಯೋಜಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು
ಪ್ರಧಾನಿ ನರೇಂದ್ರ ಮೋದಿ ಅವರು ನ. 11ರಂದು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರ ಉದ್ಘಾಟನೆ ಹಾಗೂ ವಿಮಾನ ನಿಲ್ದಾಣ ಬಳಿ ನಿರ್ಮಿಸಿರುವ 108 ಅಡಿ ಎತ್ತರದ ಕೆಂಪೇಗೌಡರ ಕಂಚಿನ ಪ್ರತಿಮೆ ಅನಾವರಣಗೊಳಿಸಲಿದ್ದು, ಈ ಕಾರ್ಯಕ್ರಮದ ಸಿದ್ಧತೆ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನಲ್ಲಿ ಪೂರ್ವಭಾವಿ ಸಭೆ ನಡೆಸಿದರು.
ಇದಕ್ಕೆ ಪೂರ್ವಭಾವಿಯಾಗಿ ಎಲ್ಲಾ ಜಿಲ್ಲೆಗಳ ಪವಿತ್ರ ಮೃತ್ತಿಕೆ ಸಂಗ್ರಹಿಸುವ ‘ಬನ್ನಿ ನಾಡ ಕಟ್ಟೋಣ’ ಎಂಬ ಅಭಿಯಾನ ನಾಳೆಯಿಂದ ಪ್ರಾರಂಭವಾಗಲಿದೆ. ಈ ಅಭಿಯಾನ ಯಶಸ್ವಿಗೊಳಿಸಲು ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ನೇತೃತ್ವದಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿಗಳು ಮತ್ತು ಪಿಡಿಒಗಳ ಸಹಕಾರ ಪಡೆಯಬೇಕು ಎಂದು ತಿಳಿಸಿದರು.
ಮೃತ್ತಿಕೆ ಸಂಗ್ರಹಿಸಲು 20 ವಾಹನಗಳ ವ್ಯವಸ್ಥೆ ಮಾಡಲಾಗಿದೆ. 15 ದಿನಗಳಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ಸಂಚರಿಸಿ ಮೃತ್ತಿಕೆ ಸಂಗ್ರಹಿಸಲಾಗುವುದು ಎಂದು ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಮಾಹಿತಿ ನೀಡಿದರು.
ಸಭೆಯಲ್ಲಿ ಸಚಿವರಾದ ಆರ್. ಅಶೋಕ, ಡಾ.ಕೆ. ಸುಧಾಕರ್, ಬಿ.ಎ. ಬಸವರಾಜ, ಕೆ. ಗೋಪಾಲಯ್ಯ ಇದ್ದರು.