ಬೆಂಗಳೂರು: ಮಾಧ್ಯಮ ಸಂವಿಧಾನದ ನಾಲ್ಕನೇ ಅಂಗವಾಗಿದ್ದು,ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಲು ನೀವು ಸಹಕರಿಸಬೇಕು ಎಂದು ಸಿಜೆ ಮನವಿ ಮಾಡಿದರು.
ಹಿಜಾಬ್ ಧರಿಸಿ ಕಾಲೇಜಿಗೆ ಬರದಂತೆ ರಾಜ್ಯದ ಕೆಲ ಶಿಕ್ಷಣ ಸಂಸ್ಥೆಗಳು ನಿರ್ಬಂಧಿಸಿರುವ ಕ್ರಮ ಪ್ರಶ್ನಿಸಿ ದಾಖಲಿಸಿರುವ ರಿಟ್ ಅರ್ಜಿಗಳನ್ನು ಹೈಕೋರ್ಟ್ ತ್ರಿಸದಸ್ಯ ಪೀಠ ವಿಚಾರಣೆ ಮುಂದುವರಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಈಗಾಗಲೇ ಮಧ್ಯಂತರ ಆದೇಶ ಹೊರಡಿಸಿದ್ದು, ಪ್ರಕರಣದ ಅಂತಿಮ ತೀರ್ಪು ಬರುವವರೆಗೆ ಶಾಲಾ – ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಯಾವುದೇ ಧಾರ್ಮಿಕ ವಸ್ತ್ರ ಧರಿಸದಂತೆ ನಿರ್ದೇಶಿಸಿದೆ. ವಸ್ತ್ರ ಸಂಹಿತೆ ಜಾರಿ ಮಾಡಿರುವ ಶಾಲೆ-ಕಾಲೇಜುಗಳಿಗೆ ಈ ನಿರ್ಬಂಧ ಅನ್ವಯಿಸಲಿದೆ ಎಂದೂ ಪೀಠ ಸ್ಪಷ್ಟಪಡಿಸಿದೆ.
ಹಿಂದಿನ ಕಲಾಪದ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿದ್ದು, ಇಂದು ಸರ್ಕಾರದ ಪರ ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ. ನಾವದಗಿ ವಾದ ಮಂಡಿಸಲಿದ್ದಾರೆ.
ಪ್ರಕರಣವನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಹಾಗೂ ನ್ಯಾಯಮೂರ್ತಿ ಖಾಜಿ ಜೈಬುನ್ನೀಸಾ ಮೊಹಿಯುದ್ದೀನಿ ಅವರಿರುವ ತ್ರಿಸಸದಸ್ಯ ಪೀಠ ವಿಚಾರಣೆ ನಡೆಸುತ್ತಿದೆ. ಇದೇ ವೇಳೆ, ಮುಖ್ಯ ನ್ಯಾಯಮೂರ್ತಿಗಳು ಮಾಧ್ಯಮಗಳು ಜವಾಬ್ದಾರಿಯುತ ನಡೆದುಕೊಳ್ಳಬೇಕು ಹಾಗೂ ಈ ಬಗ್ಗೆ ನಾವು ಯಾವುದೇ ಅಧಿಕೃತ ನಿರ್ದೇಶನ ನೀಡುವುದಿಲ್ಲ ಎಂದು ಹೇಳಿದ್ದಾರೆ.