ಮನೆ ರಾಜ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಗದೆ ತಾಯಿ ಅವಳಿ ಶಿಶುಗಳ ಸಾವು ಪ್ರಕರಣ: ತನಿಖೆಗೆ ಉನ್ನತ ಮಟ್ಟದ ಸಮಿತಿ...

ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಗದೆ ತಾಯಿ ಅವಳಿ ಶಿಶುಗಳ ಸಾವು ಪ್ರಕರಣ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ

0

ತುಮಕೂರು(Tumkur): ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಗದೆ ತಾಯಿ ಹಾಗೂ ಅವಳಿ ಶಿಶುಗಳು ಸಾವನ್ನಪ್ಪಿದ ಪ್ರಕರಣದ ತನಿಖೆಗೆ ಉನ್ನತ ಮಟ್ಟದ ಸಮಿತಿ ರಚಿಸಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಪ್ರಕಟಿಸಿದರು.

ಜಿಲ್ಲಾ ಆಸ್ಪತ್ರೆಗೆ ಗುರುವಾರ ರಾತ್ರ ಭೇಟಿ ನೀಡಿ ಮಾಹಿತಿ ಪಡೆದುಕೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಗ್ಯ ಇಲಾಖೆ ಆಯುಕ್ತರ ನೇತೃತ್ವದಲ್ಲಿ, ಮೂವರು ವೈದ್ಯರನ್ನು ಒಳಗೊಂಡ ತಂಡ ರಚಿಸಲಾಗುವುದು. ಎರಡು ವಾರದಲ್ಲಿ ವರದಿ ನೀಡಲಿದ್ದು, ನಂತರ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದರು.

ಆಸ್ಪತ್ರೆಗೆ ಬರುವ ಗರ್ಭಿಣಿ ಸೇರಿದಂತೆ ಯಾವೊಬ್ಬ ರೋಗಿಯ ದಾಖಲೆ, ಗುರುತಿನ ಕಾರ್ಡ್ ಪರಿಶೀಲಿಸದೆ ಚಿಕಿತ್ಸೆ ನೀಡಬೇಕು. ಚಿಕಿತ್ಸೆ ನೀಡಲು ನಿರಾಕರಿಸಿದರೆ ಅಂತಹ ವೈದ್ಯರು, ಸಿಬ್ಬಂದಿಯನ್ನು ವಜಾ ಮಾಡಿ, ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತಹ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು. ಅದಕ್ಕೆ ಸಂಬಂಧಿಸಿದಂತೆ ಕಾನೂನಿಗೆ ತಿದ್ದುಪಡಿ ತರಬೇಕಿದ್ದು, ಮುಂದಿನ ಅಧಿವೇಶನದಲ್ಲಿ ಕಾನೂನು ರಚಿಸಲಾಗುವುದು ಎಂದು ಹೇಳಿದರು.

ಜಿಲ್ಲಾ ಆಸ್ಪತ್ರೆಯಲ್ಲಿ ಇಂತಹ ಅಮಾನವೀಯ ಘಟನೆ ನಡೆಯಬಾರದಿತ್ತು. ಇದು ಸರ್ಕಾರಕ್ಕೆ ಒಳ್ಳೆಯ ಹೆಸರು ತರುವುದಿಲ್ಲ. ಮುಂದೆ ಇಂತಹ ಕೆಟ್ಟ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.