ಮೈಸೂರು(Mysuru): ಅಂಗನವಾಡಿಗಳು, ಶಾಲೆಗಳಿಗೆ ಶುದ್ಧ ಕುಡಿಯುವ ನೀರು, ಶೌಚಾಲಯ ಹಾಗೂ ಕಟ್ಟಡಗಳನ್ನು ಒದಗಿಸುವ ಮೂಲಕ ಅಂಗನವಾಡಿಗಳು ಮತ್ತು ಶಾಲೆಗಳಿಗೆ ಹೆಚ್ಚಿನ ಸಂಖ್ಯೆಯ ಮಕ್ಕಳನ್ನು ಹಾಜರಾಗುವಂತೆ ಮಾಡಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿಗಳಾದ ಎನ್.ಜಯರಾಮ್ ಸೂಚಿಸಿದರು.
ಇಂದು ಜಿಲ್ಲಾ ಪಂಚಾಯತ್‌ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು ಅಂಗನವಾಡಿಗಳಲ್ಲಿ ದಾಖಲಾತಿಯಾದಷ್ಟು ಸಂಖ್ಯೆಯ ಮಕ್ಕಳು ಹಾಜರಾಗುತ್ತಿಲ್ಲ. ಆದರೂ ಹೆಚ್ಚಿನ ಸಂಖ್ಯೆಯ ಹಾಜರಾತಿಗಳನ್ನು ತೋರಿಸುತ್ತಿರುವುದು ಕಂಡುಬರುತ್ತಿದೆ. ಹಾಜರಾತಿಯನ್ನು ಪಾರದರ್ಶಕವಾಗಿ ಹಾಕಬೇಕು. ಅಂಗನವಾಡಿಗಳಿಗೆ ಬರುವ ಮಕ್ಕಳೆಲ್ಲರೂ ಬಡತನದಿಂದ ಕೂಡಿದ್ದು, ಅಂತಹವರನ್ನು ಅಂಗನವಾಡಿಗಳಿಗೆ ಕಳುಹಿಸುವಂತೆ ಪೋಷಕರ ಮನವೊಲಿಸಬೇಕು. ಅಂಗನವಾಡಿಗಳಲ್ಲಿ ಪೌಷ್ಟಿಕ ಆಹಾರವನ್ನು ನೀಡುತ್ತಿದ್ದು, ಇದರಿಂದ ಮಕ್ಕಳ ಅಪೌಷ್ಟಿಕತೆಯನ್ನು ತಡೆಗಟ್ಟಲು ಸಹಕಾರಿಯಾಗುತ್ತದೆ. ಆದ್ದರಿಂದ ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ತಾಲೂಕು ಪಂಚಾಯಿತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಿದ್ದು ಇವರು ವಾರದಲ್ಲಿ ಎರಡು ಬಾರಿಯಾದರೂ ತಾಲೂಕಿಗೆ ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲನೆ ನಡೆಸಬೇಕು. ಸರ್ಕಾರದ ವಿವಿಧ ಯೋಜನೆಗಳ ಪ್ರಗತಿ ಹಾಗೂ ಸೌಲಭ್ಯಗಳು ಫಲಾನುಭವಿಗಳಿಗೆ ಪಾರದರ್ಶಕವಾಗಿ ದೊರೆಯುತ್ತಿದೆಯೇ ಎಂಬುದನ್ನು ಪರಿಶೀಲಿಸಬೇಕು. ವಿವಿಧ ನಿಗಮ ಮಂಡಳಿಗಳಡಿ, ಗಂಗಾ ಕಲ್ಯಾಣ ಯೋಜನೆಯಡಿ ಫಲಾನುಭವಿಗಳನ್ನು ಆಯ್ಕೆ ಮಾಡಿ ಬೋರ್ ವೆಲ್ ಗಳನ್ನು ಕೊರೆಸಿದ್ದು ಇವುಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿ ಕಾರ್ಯ ಆರಂಭ ಮಾಡುವ ಹಾಗೆ ಪೂರ್ಣಗೊಳಿಸಿ ಎಂದು ವಿವಿಧ ನಿಗಮಗಳ ವ್ಯವಸ್ಥಾಪಕರಿಗೆ ಸೂಚಿಸಿದರು.
ಯೋಜನೆಯ ಕಾಮಗಾರಿಗಳು 5 ಲಕ್ಷದೊಳಗಿದ್ದು, ಇವುಗಳನ್ನು ಈ ತಿಂಗಳ ಅಂತ್ಯಕ್ಕೆ ಪೂರ್ಣಗೊಳಿಸಬೇಕು. ಇನ್ನೊವೇಟಿವ್ ವರ್ಕ್’ಗೆ ಜಿಲ್ಲಾ ಪಂಚಾಯಿತಿಯಿಂದ ಅನುಮತಿ ಪಡೆಯಬೇಕಿತ್ತು. ಕಾಮಗಾರಿ ಮುಗಿದ ಒಂದು ವಾರದೊಳಗೆ ಗುತ್ತಿಗೆದಾರರಿಗೆ ಬಿಲ್‌ನ್ನು ಪಾವತಿ ಮಾಡಬೇಕು. ಸಣ್ಣ ಸಣ್ಣ ಗುತ್ತಿಗೆದಾರರಿಗೆ ಹಣ ಪಾವತಿ ಮಾಡುವಲ್ಲಿ ವಿಳಂಬ ಧೋರಣೆ ಅನುಸರಿಸಬಾರದು ಎಂದರು.
ಹಾವು ಕಡಿತಕ್ಕೆ ಔಷಧಿಗಳನ್ನು ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿಯೂ ದೊರೆಯುವಂತೆ ನೋಡಿಕೊಳ್ಳಿ. ಗರ್ಭಿಣಿ ಮತ್ತು ಬಾಣಂತಿಯರಿಗೆ ಪೌಷ್ಟಿಕ ಆಹಾರದ ಸೌಲಭ್ಯ ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಸೂಚಿಸಿದರು.
ಕೃಷಿ ಇಲಾಖೆಯ ಸಬ್ಸಿಡಿ ಯೋಜನೆಗಳು ಅರ್ಹ ರೈತರಿಗೆ ಪಾರದರ್ಶಕವಾಗಿ ತಲುಪಬೇಕು. ಮಧ್ಯವರ್ತಿಗಳು ಇರದಂತೆ ನೋಡಿಕೊಳ್ಳಬೇಕು ಇತ್ತೀಚೆಗೆ ಜಾನುವಾರುಗಳಿಗೆ ಚರ್ಮಗಂಟು ರೋಗಗಳು ಬರುತ್ತಿದ್ದು ಈ ನಿಟ್ಟಿನಲ್ಲಿ ಸೂಕ್ತ ಚಿಕಿತ್ಸೆಯನ್ನು ನೀಡುವಂತೆ ಪಶು ಸಂಗೋಪನಾ ಇಲಾಖೆಯ ಉಪನಿರ್ದೇಶಕರಿಗೆ ಸೂಚಿಸಿದರು.
ನಂತರ ಜಿಲ್ಲಾಧಿಕಾರಿಗಳಾದ ಡಾ.ಕೆ.ವಿ.ರಾಜೇಂದ್ರ ಅವರು ಮಾತನಾಡಿ ಮೂಡ ವ್ಯಾಪ್ತಿಯಲ್ಲಿ ಲೇಔಟ್ ನಿರ್ಮಾಣ ಮಾಡುವ ಸಂದರ್ಭದಲ್ಲಿ ಲೇಔಟ್ ನಿರ್ಮಿಸುವ ಡೆವಲಪರ್’ಗಳು ಅಲ್ಲಿನ ರಸ್ತೆ, ನೀರು, ವಿದ್ಯುತ್ ಸೌಲಭ್ಯವನ್ನು ಕಲ್ಪಿಸಬೇಕು. ಅಂಗನವಾಡಿಗಳು ಶಾಲೆಗಳು ಹಾಸ್ಟೆಲ್’ಗಳ ಬಳಿ ವಿದ್ಯುತ್ ತಂತಿಗಳು ಹೋಗಿದ್ದರೆ ಪರಿಶೀಲಿಸಿ ಬೇರೆಡೆಗೆ ಸ್ಥಳಾಂತರಿಸುವಂತೆ ಚೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.
ನಂತರ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಡಾ. ಬಿ.ಆರ್.ಪೂರ್ಣಿಮಾ ಅವರು ಮಾತನಾಡಿ, ಗುತ್ತಿಗೆದಾರರ ಬಿಲ್ ಪಾವತಿಗೆ ತಾಂತ್ರಿಕ ಸಮಸ್ಯೆಗಳು ಉಂಟಾದಲ್ಲಿ ಜಿಲ್ಲಾ ಪಂಚಾಯತ್‌ನ ಡಿಪಿಎಂ ಅವರನ್ನು ಸಂಪರ್ಕಿಸಿ ತಾಂತ್ರಿಕ ಸಮಸ್ಯೆ ಬಗೆಹರಿಸಿಕೊಳ್ಳಿ. ಟೆಂಡರ್ ಕರೆದಿರುವ ಕಾಮಗಾರಿಗಳಿಗೆ ಕಾರ್ಯಾದೇಶ ನೀಡಿ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾದ ಲಕ್ಷ್ಮಿಕಾಂತ ರೆಡ್ಡಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.