ಮನೆ ಸುದ್ದಿ ಜಾಲ ಬಾಲಕಾರ್ಮಿಕರನ್ನು ಗುರುತಿಸಿ ಪುನರ್ವಸತಿ ಕಲ್ಪಿಸಿ: ಡಾ.ಕೆ.ವಿ. ರಾಜೇಂದ್ರ

ಬಾಲಕಾರ್ಮಿಕರನ್ನು ಗುರುತಿಸಿ ಪುನರ್ವಸತಿ ಕಲ್ಪಿಸಿ: ಡಾ.ಕೆ.ವಿ. ರಾಜೇಂದ್ರ

0

ಮೈಸೂರು(Mysuru): ಕಿರಾಣಿ ಅಂಗಡಿಗಳು, ಕಾರ್ಖಾನೆಗಳು ಗ್ಯಾರೇಜ್‌ಗಳು ಮುಂತಾದ ಕಡೆ ಬಾಲಕಾರ್ಮಿಕರು ದುಡಿಯುತ್ತಿರುತ್ತಾರೆ. ಅಂತಹವರನ್ನು ಗುರುತಿಸಿ, ಮಾಲೀಕರ ಮೇಲೆ ಪ್ರಕರಣ ದಾಖಲಿಸಿ ಬಾಲಕಾರ್ಮಿಕತೆಯಿಂದ ಮುಕ್ತಗೊಳಿಸಿ ಶಾಲೆಗಳಿಗೆ ಸೇರಿಸಿ ಪುನರ್ವಸತಿ ಕಲ್ಪಿಸಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವಂತೆ ಸಂಬAಧಿಸಿದ ಎಲ್ಲಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳಾದ ಡಾ.ಕೆ.ವಿ.ರಾಜೇಂದ್ರ ಅವರು ಸೂಚಿಸಿದರು.

ಇಂದು ತಮ್ಮ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 14 ವರ್ಷದೊಳಗಿನ ಮಕ್ಕಳನ್ನು ಕೆಲಸದಲ್ಲಿ ನೇಮಿಸಿಕೊಳ್ಳುವುದು ಸಂಪೂರ್ಣ ನಿಷೇಧಿಸಿದ್ದು, 15 ರಿಂದ 18 ವರ್ಷದೊಳಗಿನ ಕಿಶೋರ ಕಾರ್ಮಿಕರನ್ನ ಅಪಾಯಕಾರಿ ಮತ್ತು ಅಪಾಯಕಾರಿ ಯಲ್ಲದ ಉದ್ದಿಮೆಗಳಲ್ಲಿ ದುಡಿಯುವುದು ನಿಷೇಧಿಸಲಾಗಿದೆ. ಅಧಿಕಾರಿಗಳು ಬಾಲಕಾರ್ಮಿಕರು ಕೆಲಸ ನಿರ್ವಹಿಸುವ ಸ್ಥಳಗಳಿಗೆ ಹಠಾತ್ ದಾಳಿ ಮಾಡಿ ಕೆಲಸಕ್ಕೆ ನೇಮಿಸಿಕೊಂಡಿರುವವರ ವಿರುದ್ಧ ಕಾನೂನಿನ ಕ್ರಮ ಜರುಗಿಸಿ. ಬಾಲ ಕಾರ್ಮಿಕರಿಗೆ ಪುನರ್ವಸತಿ ಕಲ್ಪಿಸಬೇಕು. ಉದ್ದಿಮೆಗಳಲ್ಲಿ ಕೆಲಸ ಮಾಡುತ್ತಿರುವ ಮಕ್ಕಳನ್ನು ಬಿಡುಗಡೆಗೊಳಿಸಿ ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರುಪಡಿಸಿ ಎಂದು ಸೂಚಿಸಿದರು.

ಗ್ರಾಮ ಪಂಚಾಯಿತಿ, ಪುರಸಭೆ, ನಗರಸಭೆ, ಮಹಾನಗರ ಪಾಲಿಕೆ ವ್ಯಾಪ್ತಿಯ ಅಂಗಡಿಗಳ ಮಾಲೀಕರು, ಉದ್ದಿಮೆದಾರರು ತಾವು ಯಾವುದೇ ಬಾಲಕಾರ್ಮಿಕರನ್ನು ನೇಮಿಸಿಕೊಂಡಿಲ್ಲ ಎಂದು ಮುಚ್ಚಳಿಕೆ ನೀಡಬೇಕು ನಂತರ ಅವರ ಪರವಾನಗಿಯನ್ನು ನವೀಕರಣ ಮಾಡಬೇಕು. ಗ್ರಾಮ ಪಂಚಾಯಿತಿ, ಪುರಸಭೆ, ನಗರಸಭೆ ವ್ಯಾಪ್ತಿಯಲ್ಲಿ ಕಾರ್ಯಪಡೆಗಳನ್ನು ರಚಿಸಿಕೊಂಡು ದಾಳಿ ನಡೆಸಿ ಬಾಲಕಾರ್ಮಿಕ ಪದ್ಧತಿಯಿಂದ ಮಕ್ಕಳನ್ನು ಮುಕ್ತಗೊಳಿಸಬೇಕು. ಈ ಸಂದರ್ಭದಲ್ಲಿ ಪೋಲಿಸ್ ಇಲಾಖೆ ಸೂಕ್ತ ಬಂದೋಬಸ್ತ್ ಒದಗಿಸಬೇಕು ಎಂದು ಸೂಚಿಸಿದರು.

ಪ್ರತಿ ಮೂರು ತಿಂಗಳಿಗೊಮ್ಮೆ ಕಡ್ಡಾಯವಾಗಿ ಟಾಸ್ಕ್ಪೋರ್ಸ್ ಸಮಿತಿ ಸಭೆಯನ್ನು ನಡೆಸಬೇಕು ಸೆಕ್ಷನ್ 17 ರಡಿ ನೇಮಕಗೊಂಡಿರುವ ಇತರೆ ಇಲಾಖೆಯ ಅಧಿಕಾರಿಗಳು ತಮ್ಮ ಹಂತದಲ್ಲಿ ಬಾಲಕಾರ್ಮಿಕ ಪದ್ಧತಿ ನಿಷೇಧ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಬೇಕು. ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿದರೆ ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಲು ಸಾಧ್ಯವಾಗುತ್ತದೆ ಎಂದರು.

ಸಭೆಯಲ್ಲಿ ಉಪವಿಭಾಗಾಧಿಕಾರಿಗಳಾದ ಕಮಲಾಬಾಯಿ, ಸಹಾಯಕ ಕಾರ್ಮಿಕ ಆಯುಕ್ತರಾದ ನಜಿಯಾ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.