ಬೆಂಗಳೂರು(Bengaluru): ಮುಂಬರುವ ವಿಧಾನಸಭೆ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸಲು ಜ.11ರಿಂದ ರಾಜ್ಯ ಕಾಂಗ್ರೆಸ್ ನಾಯಕರು ಬಸ್ ಯಾತ್ರೆ ಆರಂಭಿಸಲಿದ್ದಾರೆ.
ನಗರದ ಖಾಸಗಿ ಹೋಟೆಲ್’ನಲ್ಲಿ ಸೋಮವಾರ ಕಾಂಗ್ರೆಸ್ ಪ್ರವಾಸ ಸಮಿತಿಯ ಸಭೆ ನಡೆಯಲಾಯಿತು.
ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕವೆಂದು ವಿಭಾಗ ಮಾಡಿಕೊಂಡು ವಿಧಾನಸಭೆ ವಿರೋಧ ಪಕ್ಷದ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಯಾತ್ರೆ ಕೈಗೊಳ್ಳಲಿದ್ದಾರೆ.
ರಾಜ್ಯದ ವಿವಿಧ ಕಡೆ ನಿರಂತರ ಪ್ರವಾಸ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ, ಮುಂದಿನ 100 ದಿನ ಬಿಜೆಪಿ ಸರ್ಕಾರದ ವಿರುದ್ಧ ಹೋರಾಟ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ.
ಸ್ಥಳೀಯವಾಗಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಆಯಾ ಭಾಗದ ಹಿರಿಯ ಮುಖಂಡರು, ಮಾಜಿ ಸಚಿವರು, ಶಾಸಕರು ಪ್ರತ್ಯೇಕವಾಗಿ ಯಾತ್ರೆಗಳನ್ನು ಕೈಗೊಳ್ಳುವ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಇಂಥ ಪ್ರವಾಸದ ಮೂಲಕ ಮತದಾರರನ್ನು ಸಂಪರ್ಕಿಸಿ, ವಿಶ್ವಾಸ ಗಳಿಸಲು ಪ್ರಯತ್ನಿಸಬೇಕು ಎಂದೂ ಸೂಚನೆ ನೀಡಲಾಗಿದೆ.
ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್, ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್, ರಾಮಲಿಂಗಾ ರೆಡ್ಡಿ, ಧ್ರುವನಾರಾಯಣ, ಕೆಪಿಸಿಸಿ ಸಂವಹನ ವಿಭಾಗದ ಮುಖ್ಯಸ್ಥರಾದ ಪ್ರಿಯಾಂಕ್ ಖರ್ಗೆ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಿ.ಕೆ.ಸುರೇಶ್ ಸೇರಿದಂತೆ ಹಲವು ಮುಖಂಡರು ಸಭೆಯಲ್ಲಿ ಇದ್ದರು.