ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವೃತ್ತಿಪರ ಜಾಹೀರಾತುದಾರ ರಾಜೇಶ್ ಜೋಶಿಯನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ.
ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್’ಎ) ಅಡಿಯಲ್ಲಿ ರಾಜೇಶ್ ಜೋಶಿಯನ್ನು ಬಂಧಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಚಾರ್ಜ್‌ಶೀಟ್ ಫೈಲ್ ಮಾಡಿರುವ ಇ.ಡಿ, ಇದುವರೆಗೆ ಜೋಶಿ ಸೇರಿದಂತೆ ಒಟ್ಟು ಎಂಟು ಮಂದಿಯನ್ನು ಬಂಧಿಸಿದೆ.
ಇ.ಡಿ ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿ, ಅಬಕಾರಿ ನೀತಿಯಿಂದ ಪಡೆದ 100 ಕೋಟಿ ರೂಪಾಯಿ ಲಂಚದ ಒಂದು ಭಾಗವನ್ನು 2022ರಲ್ಲಿ ಗೋವಾದಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ (ಎಎಪಿ) ಪ್ರಚಾರಕ್ಕಾಗಿ ಬಳಸಲಾಗಿದೆ ಎಂದು ಆರೋಪಿಸಲಾಗಿದೆ.
ದೆಹಲಿಯ ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳ ಕೂಡ ಎಫ್’ಐಆರ್ ದಾಖಲಿಸಿದೆ.
ಸಿಬಿಐ ಮತ್ತು ಇ.ಡಿ ದೂರುಗಳಲ್ಲಿ ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಸರ್ಕಾರದ ಇತರೆ ಅಧಿಕಾರಿಗಳು ಆರೋಪಿಗಳೆಂದು ಹೆಸರಿಸಲಾಗಿದೆ.