ಬೆಂಗಳೂರು: ಜೈನ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಂದ ಮಾಡಲಾಗಿದ್ದ ನಾಟಕದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅವಮಾನ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ಸಿದ್ಧಾಪುರ ಠಾಣೆ ಪೊಲೀಸರು 7 ಜನ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದ್ದಾರೆ.
ವಶಕ್ಕೆ ಪಡೆದುಕೊಂಡಿರುವ ವಿದ್ಯಾರ್ಥಿಗಳೆಲ್ಲರೂ ಬಿಬಿಎ 5 ನೇ ಸೆಮಿಸ್ಟರ್ ವಿದ್ಯಾರ್ಥಿಗಳನ್ನು ಎಂದು ತಿಳಿದುಬಂದಿದೆ.
ಫೆ. 8 ರಂದು ನಿಮ್ಹಾನ್ಸ್ ಕನ್ವೆನ್ಸನ್ ಸೆಂಟರ್’ನಲ್ಲಿ ಜೈನ್ ವಿವಿಯಿಂದ ಹಮ್ಮಿಕೊಂಡಿದ್ದ ಫೆಸ್ಟ್ ಕಾರ್ಯಕ್ರಮದಲ್ಲಿ ನಾಟಕದ ಸ್ಕಿಟ್’ವೊಂದರಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರಿಗೆ ಬಿ.ಆರ್ ಬದಲು ಬೇರೆ ಪದ ಬಳಸಿ ಗೇಲಿ ಮಾಡಲಾಗಿತ್ತು. ಅಂಬೇಡ್ಕರ್ ಅವಮಾನಿಸಿದ ಈ ಸಂಭಾಷಣೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮಧುಸೂದನ್ ಎಂಬುವರು ನೀಡಿದ ದೂರಿನ ಮೇರೆಗೆ ಕಾಲೇಜು ಪ್ರಾಂಶುಪಾಲ, ಡೀನ್, ಕಾರ್ಯಕ್ರಮದ ಆಯೋಜಕರು, ನಾಟಕ ಪ್ರದರ್ಶಿಸಿದ ವಿದ್ಯಾರ್ಥಿಗಳು ಹಾಗೂ ಸ್ಕಿಟ್ ಬರಹಗಾರರ ವಿರುದ್ಧ ಜಾತಿ ನಿಂದನೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಸದ್ಯ ಪ್ರಕರಣಕ್ಕೆ ಸಂಬಂಧಿಸಿಂತೆ 7 ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದು ಸಿದ್ಧಾಪುರ ಠಾಣಾ ಪೊಲೀಸರು ತಿಳಿಸಿದ್ದಾರೆ.