ಮನೆ ಸುದ್ದಿ ಜಾಲ ಸ್ಥಳೀಯ ಸಂಸ್ಥೆ ಪ್ರತಿನಿಧಿಗಳ ಗೌರವಧನ ಹೆಚ್ಚಳಕ್ಕೆ ಸಿಎಂಗೆ ಮನವಿ ಸಲ್ಲಿಸಿದ ವಿಧಾನಪರಿಷತ್ ಶಾಸಕರ ನಿಯೋಗ

ಸ್ಥಳೀಯ ಸಂಸ್ಥೆ ಪ್ರತಿನಿಧಿಗಳ ಗೌರವಧನ ಹೆಚ್ಚಳಕ್ಕೆ ಸಿಎಂಗೆ ಮನವಿ ಸಲ್ಲಿಸಿದ ವಿಧಾನಪರಿಷತ್ ಶಾಸಕರ ನಿಯೋಗ

0

ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳ ಗೌರವ ಧನ ಹೆಚ್ಚಳ ಮತ್ತು ಇತರ ಸೌಲಭ್ಯ ಒದಗಿಸುವ ಕುರಿತು 25 ವಿಧಾನ ಪರಿಷತ್ ಶಾಸಕರ ನಿಯೋಗವು ಎಂದು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವರಾದ ಕೆ ಎಸ್ ಈಶ್ವರಪ್ಪ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ.

ದೇಶದ ಅಭಿವೃದ್ಧಿಯಲ್ಲಿ ಹಳ್ಳಿಗಳ ಪಾತ್ರ ಬಹಳ ಪ್ರಮುಖವಾಗಿದ್ದು ಹಳ್ಳಿಗಳ ಅಭಿವೃದ್ಧಿಗೆ ಗ್ರಾಮ ಪಂಚಾಯಿತಿಗಳ ಪಾತ್ರವೂ ಅಷ್ಟೇ ಮುಖ್ಯವಾಗಿರುತ್ತದೆ. ಇಲ್ಲಿ ಗ್ರಾಮವನ್ನು ಪ್ರತಿನಿಧಿಸುವ ಪಂಚಾಯಿತಿ ಸದಸ್ಯರಿಗೆ ಯಾವುದೇ ರೀತಿಯಾದಂತಹ ಸಮರ್ಪಕ ಸೌಲಭ್ಯ ಇರುವುದಿಲ್ಲ. ಅವರ ವೇತನವೂ ಸಹ ಬಹಳ ಕಡಿಮೆ ಇರುತ್ತದೆ. ಅಲ್ಲದೆ ಬೇರೆ ಯಾವುದೇ ಸೌಲಭ್ಯವು ಇವರಿಗೆ ದೊರಕುವುದಿಲ್ಲ. ಈ ಹಿನ್ನೆಲೆಯಲ್ಲಿ ಇವರ ನೆರವಿಗೆ ಸರ್ಕಾರ ಧಾವಿಸಬೇಕಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಬೇಡಿಕೆಗಳು ಏನು?

* ಗ್ರಾಮ ಪಂಚಾಯತ್ ಸದಸ್ಯರ ಗೌರವಧನ ತಿಂಗಳಿಗೆ ಕನಿಷ್ಠ 10 ಸಾವಿರ ರೂಪಾಯಿಗಳಿಗೆ ಹೆಚ್ಚಿಸುವುದು.

* ಇತರ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳಿಗೆ ಅವರವರ ಕೆಲಸ ಕಾರ್ಯಗಳಿಗೆ ಅನುಗುಣವಾಗಿ ಗೌರವಧನವನ್ನು ಹೆಚ್ಚಿಸುವುದು.

* ಚುನಾಯಿತ ಪ್ರತಿನಿಧಿಗಳಿಗೆ ಜಿಲ್ಲಾ ಮಟ್ಟದಲ್ಲಿ ಓಡಾಡಲು ಉಚಿತ ಬಸ್ ಪಾಸ್ ಒದಗಿಸುವುದು.

* ಆರೋಗ್ಯ ವಿಮೆ ಮತ್ತು ಉಚಿತ ವೈದ್ಯಕೀಯ ಸೌಲಭ್ಯವನ್ನು ಒದಗಿಸುವುದು.

• 5 ವರ್ಷಗಳನ್ನು ಪೂರ್ಣಗೊಳಿಸಿದ ಚುನಾಯಿತ ಪ್ರತಿನಿಧಿಗಳಿಗೆ ಪಿಂಚಣಿ ಸೌಲಭ್ಯ ಒದಗಿಸುವುದು.

* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಆರ್ಥಿಕವಾಗಿ ಹಿಂದುಳಿದ ನಿವೇಶನ ರಹಿತ ಚುನಾಯಿತ ಪ್ರತಿನಿಧಿಗಳಿಗೆ ನಿವೇಶನ ಸೌಲಭ್ಯವನ್ನು ನೀಡುವುದು.

ಈ ಮೇಲಿನ ಸೌಕರ್ಯಗಳನ್ನು ಒದಗಿಸಿ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳನ್ನು ಆರ್ಥಿಕವಾಗಿ ಬಲಿಷ್ಠಗೊಳಿಸಿದಾಗ ಮಾತ್ರ ಮಹಾತ್ಮ ಗಾಂಧೀಜಿಯವರು ಕಂಡ “ಗ್ರಾಮ ಸ್ವರಾಜ್ಯದ ಕನಸು ನನಸಾಗುವುದು ಎಂದು ವಿಧಾನ ಪರಿಷತ್ ಶಾಸಕರು ಮನವಿ ಪತ್ರದಲ್ಲಿ ಕೋರಿದ್ದಾರೆ.