ರಾಮನಗರ: ರಾಮನಗರದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಕ್ಯಾಂಪಸ್ ನಿರ್ಮಾಣ ಕಾರ್ಯಕ್ಕೆ ಮಾರ್ಚ್ 20ರ ಒಳಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ತಿಳಿಸಿದರು.
ರಾಮನಗರದಲ್ಲಿ ಗುರುವಾರ ನೂತನ ಜಿಲ್ಲಾಸ್ಪತ್ರೆ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಆಯುಷ್ಮಾನ್ ಭಾರತ್ ಯೋಜನೆ ಅಡಿ ರಾಜ್ಯದಾದ್ಯಂತ ತಲಾ 1.25 ಕೋಟಿ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತ ಪ್ರಯೋಗಾಲಯಗಳನ್ನು ನಿರ್ಮಿಸಲಾಗುತ್ತಿದೆ. ಅದರ ಮೊದಲ ಪ್ರಯೋಗಾಲಯವನ್ನು ಇಂದು ಉದ್ಘಾಟಿಸಲಾಗುತ್ತಿದೆ ಎಂದರು.
ಸಂಸದ ಡಿ.ಕೆ. ಸುರೇಶ್ ಮಾತನಾಡಿ, ಇಲ್ಲಿ ಆಸ್ಪತ್ರೆ ಜೊತೆಗೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಬೇಕು. ಹೆದ್ದಾರಿಯಲ್ಲಿ ಅಪಘಾತಗಳು ಹೆಚ್ಚುತ್ತಿದ್ದು, ರಾಮನಗರದಲ್ಲಿ ಟ್ರಾಮಾ ಸೆಂಟರ್ ತೆರೆಯಬೇಕು ಎಂದು ಆಗ್ರಹಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಅಶ್ವತ್ಥನಾರಾಯಣ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಶಾಸಕರಾದ ಅನಿತಾ ಕುಮಾರಸ್ವಾಮಿ, ಎ.ಮಂಜುನಾಥ ಮತ್ತಿತರರು ಇದ್ದರು.