ಮನೆ ರಾಜಕೀಯ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ: ಬಿ.ಎಸ್.ಯಡಿಯೂರಪ್ಪ

ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ: ಬಿ.ಎಸ್.ಯಡಿಯೂರಪ್ಪ

0

ಯಾದಗಿರಿ: ವಿಜಯಸಂಕಲ್ಪ ಯಾತ್ರೆಯಲ್ಲಿ ಸೇರುವ ಜನರು ನೋಡಿದರೆ ವಿಜಯೋತ್ಸವ ಆಚರಣೆಗೆ ಬರುತ್ತಿದ್ದಾರೆ ಎಂದು ಭಾಸವಾಗುತ್ತದೆ.‌ ಬಿಜೆಪಿಯೇ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ  ಹೇಳಿದರು.

ನಗರದಲ್ಲಿ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನವರು ನೀಡುತ್ತಿರುವ ಗೃಹಜ್ಯೋತಿ, ಗೃಹಲಕ್ಷ್ಮೀ‍, ಅನ್ನಭಾಗ್ಯ ಯೋಜನೆಗಳಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ‌ ಎಂದರು‌.‌

ಕಾಂಗ್ರೆಸ್, ಜೆಡಿಎಸ್‌ನವರು ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಅವರು ಹೇಳಿಕೊಳ್ಳುವುದಕ್ಕೆ ನಾನೇನು ಟೀಕೆ ಮಾಡುವುದಿಲ್ಲ ಎಂದು ತಿಳಿಸಿದರು.

ವಸತಿ ಸಚಿವ ವಿ.ಸೋಮಣ್ಣ ಅವರು ಕಾಂಗ್ರೆಸ್ ಸೇರುತ್ತಾರೆ ಎನ್ನುವುದಕ್ಕೆ ಯಾವುದೇ ಸತ್ಯಾಂಶ ಇಲ್ಲ. ಯಾರು ಕೂಡ ಬಿಜೆಪಿಯನ್ನು ಬಿಡುವುದಿಲ್ಲ ಎಂದರು.

ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಮೆರವಣಿಗೆ ಮಾಡಿರುವ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.

ಮುಂದಿನ ದಿನಗಳಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಕ್ಕೆ ಬರಲಿದ್ದಾರೆ.‌ ಬಿಜೆಪಿಯೇ ಸರ್ಕಾರ ರಚನೆ ಮಾಡಲಿದೆ. ಇದರಲ್ಲಿ ಯಾವುದೇ ಸಂಶಯ ಬೇಡ.‌ ಕಾಂಗ್ರೆಸ್ ನವರು ನಾವೇ ಮುಖ್ಯಮಂತ್ರಿ ಎಂದು ಕನಸನ್ನು ಕಾಣುತ್ತಿದ್ದಾರೆ ಅದು ನನಸಾಗುವುದಿಲ್ಲ. ಬಿಜೆಪಿ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬರಲಿದೆ ಎಂದರು.