ಮನೆ ರಾಜಕೀಯ ನಿಮ್ಹಾನ್ಸ್ ಸೇರಬೇಕಾದ ಗಿರಾಕಿಗಳ ಹೇಳಿಕೆಗೆ ಪ್ರತಿಕ್ರಿಯಿಸುವುದಿಲ್ಲ: ಡಿಕೆಶಿ

ನಿಮ್ಹಾನ್ಸ್ ಸೇರಬೇಕಾದ ಗಿರಾಕಿಗಳ ಹೇಳಿಕೆಗೆ ಪ್ರತಿಕ್ರಿಯಿಸುವುದಿಲ್ಲ: ಡಿಕೆಶಿ

0

ಬೆಂಗಳೂರು: ನಿಮ್ಹಾನ್ಸ್ ಸೇರಬೇಕಾದ ಗಿರಾಕಿಗಳು ಹೇಳಿದ್ದಕ್ಕೆಲ್ಲ ನಾನು ಪ್ರತಿಕ್ರಿಯಿಸುವುದಿಲ್ಲ. ಅವರನ್ನು ಆಸ್ಪತ್ರೆಗೆ ಸೇರಿಸುವುದು ಉತ್ತಮ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ತಿರುಗೇಟು ನೀಡಿದ್ದಾರೆ.

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಪಕ್ಷ ಹಿನಾಯ ಪರಿಸ್ಥಿತಿಯಲ್ಲಿದ್ದು, ಬಿಜೆಪಿ ಸಚಿವರಿಗೆ ಸಿಡಿ ತೋರಿಸಿ ಪಕ್ಷಕ್ಕೆ ಕರೆದುಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ನೀಡಿರುವ ಹೇಳಿಕೆ ಕುರಿತು ಮಾಧ್ಯಮಗಳು ಸದಾಶಿವನಗರ ನಿವಾಸದ ಬಳಿ ಸೋಮವಾರ ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು.

ಡಿ.ಕೆ. ಶಿವಕುಮಾರ್ ಅವರ ಕೈಗೆ ರಾಜ್ಯ ಸಿಕ್ಕರೆ ಡಿ.ಕೆ. ಶಿವಕುಮಾರ್ ಟೋಲ್ ಎಂಬ ಮತ್ತೊಂದು ಟೋಲ್ ಹಾಕುತ್ತಾರೆ ಎಂಬ ರಮೇಶ್ ಜಾರಕಿಹೊಳಿ ಅವರ ಆರೋಪದ ಬಗ್ಗೆ ಪ್ರಶ್ನಿಸಿದಾಗ, ಟೋಲ್ ವಿಚಾರವಾಗಿ ಮಾತನಾಡುವುದೇ ಆದರೆ, ಸದ್ಯಕ್ಕೆ ಬೆಂಗಳೂರು–ಮೈಸೂರು ರಾಷ್ಟ್ರೀಯ ಹೆದ್ದಾರಿಯ ಟೋಲ್ ವಿಚಾರವಾಗಿ ಮಾತನಾಡೋಣ. ಮಿಕ್ಕ ವಿಚಾರವನ್ನು ನಂತರ ಮಾತನಾಡೋಣ ಎಂದರು.

ಧ್ರುವನಾರಾಯಣ ಅವರ ಪುತ್ರನಿಗೆ ಟಿಕೆಟ್ ನೀಡುವಂತೆ ಒತ್ತಡವಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಧ್ರುವನಾರಾಯಣ ಅವರ ಕುಟುಂಬಕ್ಕೆ ಆಪ್ತರಾಗಿದ್ದಾರೆ. ಇನ್ನು ಪಕ್ಷದ ಟಿಕೆಟ್ ಹಂಚಿಕೆ ವಿಚಾರವಾಗಿ ಅವರು ಅಂತಿಮ ತೀರ್ಮಾನ ಮಾಡಲಿದ್ದಾರೆ. ಪಕ್ಷದ ನಿಷ್ಠಾವಂತ ನಾಯಕರಾದ ಧ್ರುವನಾರಾಯಣ ಅವರ ವಿಚಾರದಲ್ಲಿ ನಾನು ಪ್ರಾಮಾಣಿಕವಾಗಿ ನಮ್ಮ ನಾಯಕರಿಗೆ ಯಾವ ಸಲಹೆ ನೀಡಬೇಕೋ ಅದನ್ನು ನೀಡಿದ್ದೇನೆ. ಧ್ರುವನಾರಾಯಣ ಅವರಂತಹ ಕಾರ್ಯಾಧ್ಯಕ್ಷರನ್ನು ಕಳೆದುಕೊಂಡಿರುವುದು ಇಡೀ ಪಕ್ಷಕ್ಕೆ ದೊಡ್ಡ ನಷ್ಟವಾಗಿದೆ. ಆ ಆಘಾತದಿಂದ ನಾವಿನ್ನೂ ಹೊರಬರಲು ಸಾಧ್ಯವಾಗಿಲ್ಲ. ಸಂಘಟನೆ ಶಕ್ತಿ, ತಾಳ್ಮೆ, ನಿಷ್ಠೆ, ಸೌಮ್ಯ ವ್ಯಕ್ತಿತ್ವಕ್ಕೆ ಮತ್ತೊಂದು ಹೆಸರು ಧ್ರುವನಾರಾಯಣ ಅವರು. ಅವರ ಆತ್ಮಕ್ಕೆ ಶಾಂತಿ ಸಿಗುವಂತಹ ಕೆಲಸವನ್ನು ಪಕ್ಷ ಮಾಡಲಿದೆ ಎಂದು ತಿಳಿಸಿದರು.

ಪಕ್ಷದ ಟಿಕೆಟ್ ಪಟ್ಟಿ ಅಂತಿಮವಾಗುವುದು ಯಾವಾಗ ಎಂದು ಕೇಳಿದಾಗ, ಮಾ.16 ರಂದು ಇಲ್ಲಿ ಒಂದು ಸಭೆ ಕರೆದಿದ್ದು, ಮಾ.17ರಂದು ಪಕ್ಷದ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಅಲ್ಲಿ ಅಂತಿಮ ತೀರ್ಮಾನವಾಗಲಿದೆ ಎಂದು ತಿಳಿಸಿದರು.