ಮನೆ ಸುದ್ದಿ ಜಾಲ 12 ರಿಂದ 14 ವರ್ಷದ ಮಕ್ಕಳಿಗೆ ಕಾರ್ಬಿವ್ಯಾಕ್ಸ್ ಲಸಿಕೆ ಅಭಿಯಾನಕ್ಕೆ ಜಿಲ್ಲಾಧಿಕಾರಿ ಚಾಲನೆ

12 ರಿಂದ 14 ವರ್ಷದ ಮಕ್ಕಳಿಗೆ ಕಾರ್ಬಿವ್ಯಾಕ್ಸ್ ಲಸಿಕೆ ಅಭಿಯಾನಕ್ಕೆ ಜಿಲ್ಲಾಧಿಕಾರಿ ಚಾಲನೆ

0

ಮಂಡ್ಯ: ಜಿಲ್ಲೆಯಲ್ಲಿ 12 ರಿಂದ 14 ವರ್ಷದ ಮಕ್ಕಳಿಗೆ ಕಾರ್ಬಿ ಲಸಿಕೆಗೆ ಜಿಲ್ಲಾಮಟ್ಟದಲ್ಲಿ ಚಾಲನೆ ನೀಡಲಾಗಿದ್ದು, ಮೊದಲನೇ ಹಂತದಲ್ಲಿ ಜಿಲ್ಲಾಸ್ಪತ್ರೆಯಲ್ಲಿ ಮಾತ್ರ ಲಸಿಕೆಯನ್ನು ನೀಡಲಾಗುವುದು ಹಂತಹಂತವಾಗಿ ಮುಂದಿನ ದಿನಗಳಲ್ಲಿ ತಾಲ್ಲೂಕು ಮಟ್ಟದ ಆಸ್ಪತ್ರೆಯಲ್ಲಿಯೂ ಲಸಿಕೆಯನ್ನು ಪ್ರಾರಂಭ ಮಾಡುತ್ತೇವೆ ಎಂದು ಜಿಲ್ಲಾಧಿಕಾರಿಗಳಾದ ಎಸ್.ಅಶ್ವತಿ ಹೇಳಿದರು.
ನಗರದ ಮಿಮ್ಸ್ ಆಸ್ಪತ್ರೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಮಿಮ್ಸ್ ಸಹಯೋಗದೊಂದಿಗೆ ಜಿಲ್ಲೆಯಲ್ಲಿ 12 ರಿಂದ 14 ವರ್ಷದ  ಮಕ್ಕಳಿಗೆ  ಕೊರ್ಬಿವ್ಯಾಕ್ಸ್ ಲಸಿಕೆ ಅಭಿಯಾನ ಹಾಗೂ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಮುನ್ನೆಚ್ಚರಿಕಾ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ನಮ್ಮ ಜಿಲ್ಲೆಯಲ್ಲಿ 12 ರಿಂದ 14 ವರ್ಷದ ವಯಸ್ಸಿನ 59 ಸಾವಿರ ಮಕ್ಕಳಿದ್ದು, ಶೇಕಡ 100 ರಷ್ಟು ಲಸಿಕೆ ಗುರಿಯನ್ನು ಹೊಂದಿದ್ದು, ಪೋಷಕರು ತಮ್ಮ ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ಪಡೆಯಲು ಸಹಕರಿಸಿ ಎಂದರು.
 ಇದೇ ವೇಳೆ ಜಿಲ್ಲಾ ಆರೋಗ್ಯಾಧಿಕಾರಿಗಳಾದ ಡಾ.ಟಿ.ಎನ್ .ಧನಂಜಯ ಮಾತನಾಡಿ, ಜಿಲ್ಲೆಯಾದ್ಯಂತ ಕೋವಿಡ್ ವ್ಯಾಕ್ಸಿನ್ ಯಶಸ್ವಿಯಾಗಿ ನಡೆಯುತ್ತಿದೆ. ಈಗಾಗಲೇ ಜಿಲ್ಲೆಯಲ್ಲಿ 28 ಲಕ್ಷ ಲಸಿಕೆಯನ್ನು ನೀಡುವಲ್ಲಿ ಯಶಸ್ವಿಯಾಗಿದ್ದೇವೆ. ಅಲ್ಲದೇ ಆರಂಭದಲ್ಲಿ ಲಸಿಕೆಯನ್ನು ವಯಸ್ಕರಿಗೆ ನೀಡಲಾಗಿದ್ದು, ನಂತರ ಮಕ್ಕಳಿಗೆ ಲಸಿಕೆಯನ್ನು ನೀಡಲಾಗುತ್ತಿದೆ. ಜಿಲ್ಲೆಯಲ್ಲಿ 12 ರಿಂದ 14ವರ್ಷದ ವಯಸ್ಸಿನ ಮಕ್ಕಳಿಗೆ ಕಾರ್ಬಿ ಎಂಬ ಹೊಸ ಲಸಿಕೆಯನ್ನು ನೀಡುತ್ತಿದ್ದೇವೆ ಎಂದು ಹೇಳಿದರು.
ಕಾರ್ಬಿವ್ಯಾಕ್ಸ್ ಮೊದಲ ಡೋಸ್ ಪಡೆದ 28 ದಿನಗಳ ನಂತರ 2ನೇ ಡೋಸ್ ನೀಡಲಾಗುತ್ತದೆ ಜಿಲ್ಲೆಯ ಎಲ್ಲಾ 14 ವರ್ಷದ ಮೇಲ್ಪಟ್ಟ ಎಲ್ಲಾ ಮಕ್ಕಳಿಗೆ ಕೋವ್ಯಾಕ್ಸಿನ್ ಲಸಿಕೆಯನ್ನು ನೀಡಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಮಿಮ್ಸ್‍ನ ನಿರ್ದೇಶಕರಾದ ಎಂ. ಆರ್ .ಹರೀಶ್, ಆರ್.ಸಿ.ಹೆಚ್ ಅಧಿಕಾರಿಗಳಾದ ಡಾ. ಸೋಮಶೇಖರ್, ಡಾ.ಜಾನವಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.