ಮನೆ ರಾಜ್ಯ ಗಡಿ ಗ್ರಾಮಗಳಿಗೆ ಮಹಾರಾಷ್ಟ್ರದ ವಿಮೆ: ರಾಜ್ಯಗಳ ಬಾಂಧವ್ಯ ಕದಡುವ ಪ್ರಯತ್ನ ಎಂದ ಸಿಎಂ ಬೊಮ್ಮಾಯಿ

ಗಡಿ ಗ್ರಾಮಗಳಿಗೆ ಮಹಾರಾಷ್ಟ್ರದ ವಿಮೆ: ರಾಜ್ಯಗಳ ಬಾಂಧವ್ಯ ಕದಡುವ ಪ್ರಯತ್ನ ಎಂದ ಸಿಎಂ ಬೊಮ್ಮಾಯಿ

0

ಬೆಂಗಳೂರು: ಕರ್ನಾಟಕದ ಗಡಿಯಲ್ಲಿರುವ ಕೆಲವರಿಗೆ ವಿಮೆ ನೀಡುವ ಆದೇಶ ಮಾಡಿರುವುದು ಉದ್ಧಟತನದ ಪರಮಾವಧಿಯಾಗಿದ್ದು, ಇದು ಎರಡು ರಾಜ್ಯಗಳ ನಡುವಿನ ಬಾಂಧವ್ಯ ಕದಡುವ ಪ್ರಯತ್ನವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Join Our Whatsapp Group

ಕರ್ನಾಟಕ ಗಡಿಯೊಳಗಿರುವ 865 ಹಳ್ಳಿಗಳಿಗೂ ಅನ್ವಯ ಆಗುವಂತೆ ‘ಮಹಾತ್ಮ ಜ್ಯೋತಿರಾವ್‌ ಫುಲೆ ಜನಾರೋಗ್ಯ ಯೋಜನೆ’ ಜಾರಿ ಮಾಡಿ, ಮಹಾರಾಷ್ಟ್ರ ಸರ್ಕಾರ ಆದೇಶ ಹೊರಡಿಸಿರುವುದನ್ನು ಖಂಡಿಸಿ ಸರಣಿ ಟ್ವೀಟ್ ಮಾಡಿದ್ದಾರೆ.

ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ಸುಪ್ರೀಂ ಕೋರ್ಟ್‌ ‌ನಲ್ಲಿ ಇದ್ದರೂ ಮಹಾರಾಷ್ಟ್ರ ಸರ್ಕಾರ ಎರಡೂ ರಾಜ್ಯಗಳ ಗಡಿ ಭಾಗದಲ್ಲಿ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದೆ. ಎಂದು ಕಿಡಿಕಾರಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಹಾಗೂ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರು ಗಡಿ ವಿಚಾರದಲ್ಲಿ ಯಾವುದೇ ರೀತಿಯ ಗೊಂದಲ ಸೃಷ್ಟಿಸುವುದಿಲ್ಲ ಎಂದು ಒಪ್ಪಿಕೊಂಡಿದ್ದರು ಎಂದು ಬೊಮ್ಮಾಯಿ ತಿಳಿಸಿದ್ದಾರೆ.

ಈಗ ಕರ್ನಾಟಕದ 865 ಗ್ರಾಮಗಳ ಜನತೆಗೆ ಆರೋಗ್ಯ ವಿಮೆ ಯೋಜನೆ ಜಾರಿಗೆ ಆದೇಶ ಮಾಡಿರುವುದು ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವ ಕೆಲಸವಾಗಿದೆ. ಮಹಾರಾಷ್ಟ್ರ ಸರ್ಕಾರ ತಕ್ಷಣ ತನ್ನ ಆದೇಶವನ್ನು ವಾಪಸ್ ಪಡೆದು, ಅಮಿತ್ ಶಾ ಅವರ ಸೂಚನೆಗೆ ಗೌವರ ಕೊಡುವ ಮೂಲಕ ಎರಡೂ ರಾಜ್ಯಗಳ ನಡುವಿನ ಬಾಂಧವ್ಯ ಕಾಪಾಡುವ ಕೆಲಸ ಮಾಡಬೇಕು ಎಂದು ಬೊಮ್ಮಾಯಿ ಆಗ್ರಹಿಸಿದ್ದಾರೆ.

ಮಹಾರಾಷ್ಟ್ರ ಸರ್ಕಾರ ಇದೇ ರೀತಿ ಉದ್ದಟತನ ಮುಂದುವರೆಸಿದರೆ ಕರ್ನಾಟಕ ಸರ್ಕಾರವೂ ಕೂಡ ಮಹಾರಾಷ್ಟ್ರ ಗಡಿಯಲ್ಲಿರುವ ಕನ್ನಡಿಗರ ರಕ್ಷಣೆಗೆ ಇದೇ ರೀತಿಯ ವಿಮೆ ಜಾರಿಗೊಳಿಸಲಾಗುವುದು ಎಂದು ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕ ಗಡಿಯಲ್ಲಿರುವ ಜನರಿಗೆ ವಿಮೆ ನೀಡುವ ಹೆಸರಿನಲ್ಲಿ ಮಹಾರಾಷ್ಟ್ರ ಸರ್ಕಾರ, ಅವರಿಂದ ಮಹಾರಾಷ್ಟ್ರಕ್ಕೆ ಸೇರಿದವರೆಂದು ಘೋಷಣಾ ಪತ್ರ ತೆಗೆದುಕೊಳ್ಳುವುದು ಖಂಡನೀಯ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.