ನವದೆಹಲಿ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಬುಧವಾರ ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದರು. ಈ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಹ ಉಪಸ್ಥಿತರಿದ್ದರು.
ದೆಹಲಿಯ ಖರ್ಗೆ ನಿವಾಸದಲ್ಲಿ ಸಭೆ ನಡೆಸಿದ ನಾಯಕರು 2024ರ ಲೋಕಸಭೆ ಚುನಾವಣೆಯಲ್ಲಿ ವಿರೋಧ ಪಕ್ಷಗಳ ಒಗ್ಗಟ್ಟಿನ ಕುರಿತು ಚರ್ಚೆ ನಡೆಸಿದ್ದಾರೆ.
ಬಿಜೆಪಿಯನ್ನು ಎದುರಿಸಲು ಸಮಾನ ಮನಸ್ಕ ಪಕ್ಷಗಳ ನಡುವೆ ಒಗ್ಗಟ್ಟು ಮೂಡಿಸಲು ಖರ್ಗೆ ಇತ್ತೀಚೆಗೆ ಹಲವಾರು ವಿರೋಧ ಪಕ್ಷದ ನಾಯಕರೊಂದಿಗೆ ಮಾತನಾಡಿದ್ದಾರೆ.
ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಮತ್ತು ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು ಖರ್ಗೆ ಸಂಪರ್ಕಿಸಿದ್ದು, ಮುಂದಿನ ವಾರಗಳಲ್ಲಿ ವಿರೋಧ ಪಕ್ಷದ ನಾಯಕರೊಂದಿಗೆ ಉನ್ನತ ಮಟ್ಟದ ಸಭೆ ನಡೆಸಬಹುದು ಎನ್ನಲಾಗಿದೆ.














