ಅಯೋಧ್ಯೆ (ಉತ್ತರ ಪ್ರದೇಶ): ಖಾಸಗಿ ಬಸ್ ಮತ್ತು ಟ್ರಕ್ ಮಧ್ಯೆ ಡಿಕ್ಕಿಯಾಗಿ 7 ಮಂದಿ ಸಾವನ್ನಪ್ಪಿದ್ದು, 40ಕ್ಕೂ ಅಧಿಕ ಜನರು ಗಾಯಗೊಂಡಿರುವ ಘಟನೆ ಲಕ್ನೋ ಗೋರಖ್ ಪುರ ಹೆದ್ದಾರಿಯ ಅಯೋಧ್ಯಾ ಕೊತ್ವಾಲಿ ಪ್ರದೇಶದಲ್ಲಿ ನಡೆದಿದೆ.
ಅಯೋಧ್ಯೆಯಿಂದ ಬರುತ್ತಿದ್ದ ಖಾಸಗಿ ಬಸ್ ಅಂಬೇಡ್ಕರ್‌ನಗರ ಕಡೆಗೆ ತೆರಳಲು ಹೆದ್ದಾರಿಯಲ್ಲಿ ತಿರುವು ತೆಗೆದುಕೊಳ್ಳುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಟ್ರಕ್ ಗೆ ರಭಸವಾಗಿ ಡಿಕ್ಕಿ ಹೊಡೆದಿದೆ. ಇದರಿಂದ ಬಸ್ ಮೇಲೆ ಟ್ರಕ್ ಉರುಳಿಕೊಂಡು ಬಿದ್ದಿದೆ. ಪರಿಣಾಮ ಬಸ್ ನಲ್ಲಿದ್ದ ಜನರ ಪೈಕಿ 7 ಮಂದಿ ಸ್ಥಳದಲ್ಲೇ ಅಸುನೀಗಿದ್ದಾರೆ.
ಘಟನೆಯ ಬಗ್ಗೆ ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸಿ, ಬಸ್ನಲ್ಲಿ ಸಿಲುಕಿದ್ದವರ ರಕ್ಷಣಾ ಕಾರ್ಯ ನಡೆಸಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಅಯೋಧ್ಯೆಯ ಮುಖ್ಯ ವೈದ್ಯಾಧಿಕಾರಿ ಡಾ.ಅಜಯ್ ರಾಜಾ ಪ್ರಕಾರ, ಅಪಘಾತದಲ್ಲಿ 7 ಜನರು ಸಾವನ್ನಪ್ಪಿದ್ದಾರೆ. 40 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಸಿ ಬಸ್ ಮತ್ತು ಟ್ರಕ್ ಅಡಿ ಸಿಲುಕಿದ್ದವರ ರಕ್ಷಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಗಾಯಗೊಂಡವರನ್ನು ಉಪಚರಿಸಲು ಹತ್ತಕ್ಕೂ ಹೆಚ್ಚು ಆಂಬ್ಯುಲೆನ್ಸ್‌ಗಳನ್ನು ನಿಯೋಜಿಸಲಾಗಿದೆ. ಅಪಘಾತಕ್ಕೀಡಾದ ವಾಹನದಲ್ಲಿ ಸಿಲುಕಿರುವ ಪ್ರಯಾಣಿಕರನ್ನು ಸ್ಥಳಾಂತರಿಸಲಾಗಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ನಿತೀಶ್ ಕುಮಾರ್ ತಿಳಿಸಿದ್ದಾರೆ.
ದುರಂತದ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತೀವ್ರ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ದು ಸೂಕ್ತ ಚಿಕಿತ್ಸೆ ನೀಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ. ಅಗಲಿದ ಆತ್ಮಗಳಿಗೆ ಶಾಂತಿ ಸಿಗಲಿ. ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ದು ಅವರಿಗೆ ಸೂಕ್ತ ಚಿಕಿತ್ಸೆ ನೀಡಿ ಪರಿಹಾರ ಕಾರ್ಯವನ್ನು ಚುರುಕುಗೊಳಿಸಿ ಎಂದು ಸೂಚನೆ ನೀಡಿದ್ದಾರೆ.