ಇಂಫಾಲ: ಮಣಿಪುರದಲ್ಲಿ ಬಹುಸಂಖ್ಯಾತ ಮೈತೆ ಸಮುದಾಯವನ್ನು ಪರಿಶಿಷ್ಟ ಪಂಗಡದ ವರ್ಗಕ್ಕೆ ಸೇರಿಸುವುದರ ವಿರುದ್ಧದ ಪ್ರತಿಭಟನೆಯ ನಡುವೆ ವ್ಯಾಪಕ ಹಿಂಸಾಚಾರ ಭುಗಿಲೆದ್ದಿದ್ದು, 8 ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ.
ಮಾತ್ರವಲ್ಲದೇ ಐದು ದಿನಗಳ ಕಾಲ ಇಂಟರ್ ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ.
ಮುಂಜಾಗ್ರತೆ ಕ್ರಮವಾಗಿ ಇಂಫಾಲ್ ಪಶ್ಚಿಮ, ಕಾಕ್ಚಿಂಗ್, ತೌಬಲ್, ಜಿರಿಬಾಮ್, ಬಿಷ್ಣುಪುರ, ಚುರಾಚಂದ್ಪುರ, ಕಾಂಗ್ಪೋಕ್ಪಿ ಮತ್ತು ತೆಂಗ್ನೌಪಾಲ್ ಜಿಲ್ಲೆಗಳಲ್ಲಿ ಕರ್ಫ್ಯೂ ವಿಧಿಸಲಾಗಿದೆ.
ಕೆಲ ಕಿಡಿಗೇಡಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಚೋದನಕಾರಿ ಸಂದೇಶಗಳನ್ನು ಹರಡುವ ಮೂಲಕ ಸಮಾಜದಲ್ಲಿ ಶಾಂತಿ ಕದಡುವ ಪ್ರಯತ್ನ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ ಎಂದು ಗೃಹ ಇಲಾಖೆ ತಿಳಿಸಿದೆ.
ಕಾನೂನು ಮತ್ತು ಸುವ್ಯವಸ್ಥೆಯನ್ನು ಗಮನದಲ್ಲಿಟ್ಟುಕೊಂಡು ಬಹಳಷ್ಟು ಮಂದಿಯನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಎಲ್ಲ ಕಡೆ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಕೇಂದ್ರದಿಂದ ಬಂದಿರುವ ಸೇನಾ ಮತ್ತು ಅರೆ ಸೇನಾಪಡೆ ಯೋಧರನ್ನು ಎಲ್ಲಾ ಕಡೆ ಭದ್ರತೆಗೆ ನಿಯೋಜಿಸಲಾಗಿದೆ ಎಂದು ಗೃಹ ಇಲಾಖೆ ತಿಳಿಸಿದೆ.
ಮೇಟಿ ಸಮುದಾಯವನ್ನು ಮೀಸಲಾತಿಗೆ ಸೇರಿಸಬೇಕು ಎಂದು ಪ್ರತಿಭಟನೆಗಳು ನಡೆಯುತ್ತಿವೆ. ಈ ನಡುವೆ ಮೇಟಿ ಸಮುದಾಯದ ಮುಖಂಡರು ಬೃಹತ್ ಸಮಾವೇಶ ನಡೆಸುವುದಾಗಿ ಘೋಷಣೆ ಮಾಡಿದ್ದಾರೆ.