ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಕಾಂಗ್ರೆಸ್ ಪಕ್ಷವನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.
ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, ಕಾಂಗ್ರೆಸ್ ಪಕ್ಷವು 120ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಬಹುಮತಕ್ಕೆ ಬೇಕಿರುವ ಸ್ಥಾನ 113 ಆಗಿದೆ. ಫಲಿತಾಂಶದ ಸ್ಪಷ್ಟ ಚಿತ್ರಣ ಸಿಗುತ್ತಿದ್ದಂತೆಯೇ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಕಾಂಗ್ರೆಸ್ ಪಕ್ಷವನ್ನು ಅಭಿನಂದಿಸಿದ್ದಾರೆ.
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿದ ಕಾಂಗ್ರೆಸ್ ಪಕ್ಷಕ್ಕೆ ಅಭಿನಂದನೆಗಳು. ಜನರ ಆಶೋತ್ತರಗಳನ್ನು ಈಡೇರಿಸುವ ನಿಟ್ಟಿನಲ್ಲಿ ಅವರಿಗೆ ನನ್ನ ಶುಭಾಶಯಗಳು ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
ಕರ್ನಾಟಕ ಚುನಾವಣೆಯಲ್ಲಿ ನಮಗೆ ಬೆಂಬಲ ನೀಡಿದ ಎಲ್ಲರಿಗೂ ಧನ್ಯವಾದ ಹೇಳುತ್ತೇನೆ. ಬಿಜೆಪಿ ಕಾರ್ಯಕರ್ತರ ಶ್ರಮವನ್ನು ನಾನು ಪ್ರಶಂಸಿಸುತ್ತೇನೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಹುರುಪಿನಿಂದ ಕರ್ನಾಟಕಕ್ಕೆ ಸೇವೆ ಸಲ್ಲಿಸುತ್ತೇವೆ ಎಂದು ಮತ್ತೊಂದು ಟ್ವೀಟ್ನಲ್ಲಿ ಅವರು ಉಲ್ಲೇಖಿಸಿದ್ದಾರೆ.
ಚುನಾವಣಾ ಆಯೋಗದ ವೆಬ್ಸೈಟ್ ಮಾಹಿತಿ ಪ್ರಕಾರ ಶನಿವಾರ ಸಂಜೆ 5.30ರ ವೇಳೆಗೆ ಕಾಂಗ್ರೆಸ್ ಅಭ್ಯರ್ಥಿಗಳು 121 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, 15 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದಾರೆ. ಬಿಜೆಪಿ ಅಭ್ಯರ್ಥಿಗಳು 56 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, 8 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದಾರೆ. ಜೆಡಿಎಸ್ 20 ಕ್ಷೇತ್ರಗಳನ್ನು ತನ್ನದಾಗಿಸಿಕೊಂಡಿದೆ.