ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿಗಳಿಗೆ ಕಂಡಿಷನ್ಸ್ ಇರುತ್ತದೆ. ಮೊದಲ ಕ್ಯಾಬಿನೆಟ್’ನಲ್ಲೇ 5 ಗ್ಯಾರಂಟಿ ಈಡೇರಿಸುವ ಭರವಸೆ ಕೊಟ್ಟಿದ್ದೇವೆ. ಅದಕ್ಕೆ ನಾವು ಬದ್ಧರಾಗಿ ಇರುತ್ತೇವೆ ಎಂದು ಹಿರಿಯ ನಾಯಕ ಪರಮೇಶ್ವರ್ ತಿಳಿಸಿದ್ದಾರೆ.
ಚುನಾವಣೆಯಲ್ಲಿ ಗೆಲ್ಲುವ ಮುನ್ನ 5 ಉಚಿತ ಗ್ಯಾರೆಂಟಿಗಳನ್ನು ಘೋಷಣೆ ಮಾಡಿರುವ ಕಾಂಗ್ರೆಸ್, ಅಧಿಕಾರಕ್ಕೆ ಬರುತ್ತಿದ್ದಂತೆ ತನ್ನ ವರಸೆ ಬದಲಾಯಿಸಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಜಿ. ಪರಮೇಶ್ವರ್, ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಗೆ ಷರತ್ತುಗಳು ಇರಲಿವೆ ಎಂದು ಹೇಳಿದ್ದಾರೆ.
ಗ್ರಾಮೀಣ ಭಾಗದ ಜನರು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ನಾವು ವಿದ್ಯುತ್ ಶುಲ್ಕ ಪಾವತಿಸುತ್ತಿಲ್ಲ ಎಂದು ಹೇಳುತ್ತಿದ್ದಾರೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮೊದಲ ಕ್ಯಾಬಿನೆಟ್‌ನಲ್ಲಿ 5 ಗ್ಯಾರಂಟಿ ಈಡೇರಿಸುವ ಭರವಸೆ ಕೊಟ್ಟಿದ್ದೇವೆ. ಅದಕ್ಕೆ ನಾವು ಬದ್ದರಾಗಿ ಇದ್ದು ಮೊದಲ ಕ್ಯಾಬಿನೆಟ್‌ನಲ್ಲಿ ಜಾರಿ ಮಾಡುತ್ತೇವೆ ಎಂದು ತಿಳಿಸಿದರು.
ಆಯಾ ಇಲಾಖೆಯ ಸಚಿವರು ಕೂತು ಗ್ಯಾರಂಟಿ ಜಾರಿ ಮಾಡುವ ಬಗ್ಗೆ ಕೆಲಸ ಮಾಡುತ್ತೇವೆ. ಹಾಗೆಯೇ ನೀಡಿದರೆ ಸುಮ್ಮನೆ ಎಲ್ಲರೂ ತೆಗೆದುಕೊಳ್ಳುತ್ತಾರೆ. ಗ್ಯಾರಂಟಿಗಳಿಗೆ ಮಾನದಂಡ ನಿಗದಿ ಮಾಡಲಾಗುವುದು ಎಂದು ವಿವರಿಸಿದರು.
ಸಿಎಂ ಆಯ್ಕೆ ವಿಚಾರವಾಗಿ ಮಾತನಾಡಿ, ಎಲ್ಲವು ಸುಸೂತ್ರವಾಗಿ ನಡೆಯುತ್ತದೆ. ಹೈಕಮಾಂಡ್ ಪ್ರಕ್ರಿಯೆ ನಡೆಸುತ್ತಿದೆ. ಈಗಾಗಲೇ ಶಾಸಕರ ಅಭಿಪ್ರಾಯ ಪಡೆದಿದ್ದಾರೆ. ದೆಹಲಿಯಲ್ಲಿ ಸೋನಿಯಾ, ರಾಹುಲ್ ಹಾಗೂ ಅಧ್ಯಕ್ಷರಾದ ಖರ್ಗೆ ಅವರು ಕೂತು ಚರ್ಚೆ ಮಾಡಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತಾರೆ.