ಬೆಂಗಳೂರು: ಸಮ್ಮಿಶ್ರ ಸರ್ಕಾರದ ಪತನದಲ್ಲಿ ಸಿದ್ದರಾಮಯ್ಯ ಪಾತ್ರ ನಿರಾಕರಿಸಲು ಸಾಧ್ಯವೇ? ಎಂದು ಪ್ರಶ್ನಿಸಿ ಮಾಜಿ ಸಚಿವ ಡಾ.ಕೆ.ಸುಧಾಕರ್ ಸರಣಿ ಟ್ವೀಟ್ ಮಾಡಿದ್ದಾರೆ.
2018ರಲ್ಲಿ ಅಂದಿನ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ನಮಗಾಗುತ್ತಿದ್ದ ಅನ್ಯಾಯದ ಬಗ್ಗೆ ಹೇಳಿಕೊಳ್ಳಲು ಶಾಸಕರುಗಳು ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಸಿದ್ದರಾಮಯ್ಯನವರ ಬಳಿ ಹೋದಾಗಲೆಲ್ಲ ಈ ಸರ್ಕಾರದಲ್ಲಿ ನನ್ನದೇ ಏನು ನಡೆಯುತ್ತಿಲ್ಲ, ನನ್ನ ಕ್ಷೇತ್ರದ, ನನ್ನ ಜಿಲ್ಲೆಯ ಕೆಲಸಗಳೇ ಆಗುತ್ತಿಲ್ಲ ಎಂದು ಹೇಳುತ್ತಿದ್ದರು ಎಂದಿದ್ದಾರೆ.
2019ರ ಲೋಕಸಭೆ ಚುನಾವಣೆವರೆಗೂ ಸಹಿಸಿಕೊಳ್ಳಿ, ಲೋಕಸಭೆ ಚುನಾವಣೆ ಮುಗಿದ ನಂತರ ಯಾವುದೇ ಕಾರಣಕ್ಕೂ ಒಂದು ದಿವಸವೂ ಕುಮಾರಸ್ವಾಮಿ ಅವರ ನೇತೃತ್ವದ ಈ ಸಮ್ಮಿಶ್ರ ಸರ್ಕಾರ ಇರಲು ಬಿಡುವುದಿಲ್ಲ ಎಂದು ಶಾಸಕರುಗಳಿಗೆ ಸಮಾಧಾನ ಮಾಡುತ್ತಿದ್ದರು ಎಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ನಮ್ಮ ಕ್ಷೇತ್ರಗಳಲ್ಲಿ ನಮ್ಮನ್ನು ನಂಬಿದ ಕಾರ್ಯಕರ್ತರನ್ನ, ಮುಖಂಡರನ್ನ ಉಳಿಸಿಕೊಳ್ಳಲು ದೊಡ್ಡ ರಿಸ್ಕ್ ತೆಗೆದುಕೊಂಡು ರಾಜೀನಾಮೆ ಕೊಟ್ಟು ಮತ್ತೊಮ್ಮೆ ಜನರಿಂದ ಆರಿಸಿ ಬಂದು ಮಂತ್ರಿಗಳಾದೆವು. ನಮ್ಮ ನಡೆಯಲ್ಲಿ ಸಿದ್ದರಾಮಯ್ಯನವರ ಪ್ರೇರಣೆ, ಪರೋಕ್ಷ ಅಥವಾ ಅಪರೋಕ್ಷ ಪಾತ್ರ ಇಲ್ಲವೆಂದು ಸಿದ್ದರಾಮಯ್ಯನವರು ನಿರಾಕರಿಸಲು ಸಾಧ್ಯವೇ? ಎಂದು ಪ್ರಶ್ನಿಸಿದ್ದಾರೆ.