ಗುವಾಹಟಿ: ಅಸ್ಸಾಂ ರಾಜ್ಯದ ಗುವಾಹಟಿ ಜಲುಕ್ಬರಿ ಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಟ 7 ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಹಲವರಿಗೆ ಗಾಯಗಳಾಗಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ.
ಅಜಾರಾ ಪ್ರದೇಶದಿಂದ ವೇಗವಾಗಿ ಬರುತ್ತಿದ್ದ ಕಾರು ಡಿವೈಡರ್ ದಾಟಿ ಎದುರಿನ ಲೇನ್ ನಲ್ಲಿ ಸಾಗುತ್ತಿದ್ದ ಸರಕು ಸಾಗಣೆ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ 7 ಮಂದಿ ಸಾವನ್ನಪ್ಪಿದ್ದಾರೆ. ಇನ್ನು ಸರಕು ಸಾಗಣೆ ಟ್ರಕ್ ನಲ್ಲಿದ್ದ 6 ಮಂದಿ ಘಟನೆಯಲ್ಲಿ ಗಾಯಗೊಂಡಿದ್ದಾರೆ.
ಮೃತರು 7 ಮಂದಿ ಅಸ್ಸಾಂ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು, ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಸಿದ್ದಾರೆ.
ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿರುವ ಅಸ್ಸಾಂ ರಾಜ್ಯದ ಮುಖ್ಯಮಂತ್ರಿ ಹಿಮಂತ್ ಅವರು, ಮೃತರ ಕುಟುಂಬಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಜಲುಕ್ಬರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಯುವ ಮತ್ತು ಅಮೂಲ್ಯ ಜೀವಗಳನ್ನು ಕಳೆದುಕೊಂಡಿರುವುದು ಅತೀವ್ರ ನೋವು ತಂದಿದೆ. ಮೃತರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆ. ಘಟನೆ ಸಂಬಂಧ ಅಧಿಕಾರಿಗಳೊಂದಿಗೆ ಮಾತನಾಡಿದ್ದು, ಗಾಯಗೊಂಡವರಿಗೆ ಸಾಧ್ಯವಿರುವ ಎಲ್ಲ ವೈದ್ಯಕೀಯ ನೆರವು ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.