ಮೈಸೂರು: ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್ ಐ) ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಮಹಿಳಾ ಕುಸ್ತಿಪಟುಗಳು ಲೈಂಗಿಕ ದೌರ್ಜನ್ಯ ಆರೋಪಿಸಿರುವ ಹಿನ್ನೆಲೆಯಲ್ಲಿ ಬ್ರಿಜ್ ಭೂಷಣ ಸಿಂಗ್ ಬಂಧನಕ್ಕೆ ಆಗ್ರಹಿಸಿ ಮೈಸೂರಿನ ಗಾಂಧಿ ವೃತ್ತದಲ್ಲಿ ಸಂಯುಕ್ತ ಹೋರಾಟ ಕರ್ನಾಟಕ ಸಂಘದಿಂದ ಇಂದು ಪ್ರತಿಭಟನೆ ನಡೆಸಲಾಯಿತು.
ಹಲೋ ಮಿಸ್ಟರ್ ಮೋದಿ ನೀವು ಹೇಳಿದ್ದೇನು ಮಾಡಿದ್ದೇನು? ಹೇಳಿದ್ದು ಬೇಟಿ ಬಚಾವೋ, ಬೇಟಿ ಪಡಾವೋ ಎಂದು. ಆದರೆ ಮಾಡಿದ್ದು ಅತ್ಯಾಚಾರಿಗಳ ರಕ್ಷಣೆ ಎಂದು ಪ್ರಧಾನಿ ಮೋದಿ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಮಹಿಳಾ ಕುಸ್ತಿ ಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಗುರಿಯಾಗಿದ್ದಾರೆ. ಹೀಗಾಗಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಕೂಡಲೇ ಬಂಧಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಅಲ್ಲದೇ ಭಾರತೀಯ ಕುಸ್ತಿ ಫೆಡರೇಶನ್ ಅನ್ನು ವಜಾಗೊಳಿಸಬೇಕು. ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಸಂಸದರ ರಕ್ಷಣೆಗೆ ನಿಂತಿದ್ದಾರೆ. ದೌರ್ಜನ್ಯಕ್ಕೆ ಒಳಗಾಗಿರುವ ಕುಸ್ತಿಪಟುಗಳಿಗೆ ಮೊದಲು ನ್ಯಾಯ ಸಿಗಬೇಕು. ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೇ ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರ ಇದರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಪ್ರತಿಭಟನಾನಿರತರು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಪ್ರತಿಭಟನೆಯಲ್ಲಿ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ಪ್ರೊಫೆಸರ್ ಕೆ ಎಸ್ ಭಗವಾನ್ ಸೇರಿ ಹಲವರು ಭಾಗಿಯಾಗಿದ್ದರು.