ಮಂಗಳೂರು: ನೈತಿಕ ಪೊಲೀಸ್ ಗಿರಿ ತಡೆಯಲು ‘ಆ್ಯಂಟಿ ಕಮ್ಯುನಲ್ ವಿಂಗ್’ ಎಂಬ ನೂತನ ಪೊಲೀಸ್ ಪಡೆಯನ್ನು ಗೃಹ ಸಚಿವ ಜಿ ಪರಮೇಶ್ವರ್ ಘೋಷಣೆ ಮಾಡಿದ್ದಾರೆ.
ಈ ಬಗ್ಗೆ ಮಂಗಳೂರಿನಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ಮಾತನಾಡುತ್ತಾ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈತಿಕ ಪೊಲೀಸ್ ಗಿರಿ ಹೆಚ್ಚು ನಡೆಯುತ್ತಿದೆ. ಇದನ್ನು ನಾವು ತಡೆಯದಿದ್ದರೆ ಇಲಾಖೆ ಹಾಗೂ ರಾಜ್ಯಕ್ಕೆ ಕೆಟ್ಟ ಹೆಸರು ಬರುತ್ತದೆ. ಹೀಗಾಗಿ ನೈತಿಕ ಪೊಲೀಸ್ ಗಿರಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಇದಕ್ಕಾಗಿ ಮಂಗಳೂರು ಕಮೀಷನೇಟರ್ ವ್ಯಾಪ್ತಿಯಲ್ಲಿ ‘ಆ್ಯಂಟಿ ಕಮ್ಯುನಲ್ ವಿಂಗ್’ ಪ್ರಾರಂಭ ಮಾಡುತ್ತಿದ್ದೇವೆ. ಈ ವಿಂಗ್ ನಲ್ಲಿ ಸಮರ್ಥ ಅಧಿಕಾರಿಗಳು ಇರಲಿದ್ದಾರೆ ಎಂದು ಹೇಳಿದರು.
ಪೊಲೀಸ್ ಇಲಾಖೆಗೆ ಸಾಕಷ್ಟು ಸವಾಲುಗಳಿವೆ. ಕರಾವಳಿ ಭಾಗದಲ್ಲಿ ಒಳ್ಳೆಯ ಜನರಿದ್ದಾರೆ ಎಂಬುದನ್ನು ಇಡೀ ದೇಶವೇ ನಂಬುತ್ತದೆ. ಇದರ ಜತೆಗೆ ಜಿಲ್ಲೆಯಲ್ಲಿ ಶಾಂತಿ, ಕೋಮು ಸಾಮರಸ್ಯ ಇಲ್ಲ ಎಂಬ ಮಾತಿದೆ. ಶಾಂತಿ-ಸೌಹಾರ್ದತೆ ಇಲ್ಲ ಎಂಬ ಕಾರಣ ಮುಂದಿಟ್ಟುಕೊಂಡು ಮಂಗಳೂರಿಗೆ ಕಂಪೆನಿಗಳು ಹೂಡಿಕೆ ಮಾಡಲು ಬರುತ್ತಿಲ್ಲ. ಯಾವ ಧೈರ್ಯದಲ್ಲಿ ಸಾವಿರಾರು ಕೋಟಿ ರೂಪಾಯಿ ಹೂಡಿಕೆ ಮಾಡಬೇಕು ಎಂದು ಕೇಳುತ್ತಾರೆ. ಇನ್ನು ಮುಂದೆ ಕೋಮು ಭಾವನೆಗಳನ್ನು ಪ್ರಚೋದನೆ ಮಾಡುವವರ ಮೇಲೂ ಕ್ರಮ ಕೈಗೊಳ್ಳುತ್ತೇವೆ. ಇಲಾಖೆಗೆ ಹಳೆಯ ಪ್ರಕರಣಗಳ ಫಾಲೋ ಅಪ್ ಮಾಡಲು ಸೂಚನೆ ನೀಡಿದ್ದು, ಪ್ರಕರಣಗಳ ಜವಾಬ್ದಾರಿಯನ್ನು ಅಧಿಕಾರಿಗಳು ತೆಗೆದುಕೊಳ್ಳಬೇಕು ಎಂದರು.
ಪ್ರಣಾಳಿಕೆ ಸಮಿತಿ ಅಧ್ಯಕ್ಷನಾದ ಸಂದರ್ಭದಲ್ಲಿ 20 ಸಂಸ್ಥೆಗಳ ಮುಖ್ಯಸ್ಥರನ್ನು ಭೇಟಿಯಾಗಿದ್ದಾಗ, ಇಲ್ಲಿ ಶಾಂತಿ ಕಲ್ಪಿಸಿಕೊಡಿ ಎಂದು ಹೇಳಿದ್ದರು. ಈ ಹಿಂದೆ ಕೋಮು ಸೌಹಾರ್ದತೆಗಾಗಿ ಪಾದಯಾತ್ರೆಯನ್ನೂ ಮಾಡಿದ್ದೆ. ಕರಾವಳಿಯಲ್ಲಿ ಇಂದು ಭಯದ ವಾತಾವರಣ ಇದೆ ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ. ಈ ಪರಿಸ್ಥಿತಿಯನ್ನು ತಡೆದು, ಕೋಮು ಸೌಹಾರ್ದತೆ ತರಲು ಪೊಲೀಸರಿಗೆ ಕಠಿಣ ಸೂಚನೆ ನೀಡಿದ್ದೇನೆ ಎಂದರು.