ಮನೆ ರಾಜಕೀಯ ಆಪ್ ಸೇರಿದ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್

ಆಪ್ ಸೇರಿದ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್

0

ನವದೆಹಲಿ: ಪಂಚರಾಜ್ಯ ಚುನಾವಣೆಯಲ್ಲಿ ಪಂಜಾಬ್‌ನಲ್ಲಿ ಅಧಿಕಾರ ಹಿಡಿದ ಬಳಿಕ ಕರ್ನಾಟಕದ ಮೇಲೆ ಕಣ್ಣಿಟ್ಟಿರುವ ಆಮ್ ಆದ್ಮಿ ಪಕ್ಷ ಮುಂಬರುವ ಚುನಾವಣೆಗಾಗಿ ಹಲವಾರು ನಾಯಕರ ಸಂಪರ್ಕ ಮಾಡಿದೆ.

ಇದರ ಬೆನ್ನಲ್ಲೆ ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಕರ್ನಾಟಕದ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಎಎಪಿ ಪಕ್ಷ ಸೇರ್ಪಡೆಗೊಂಡಿದ್ದಾರೆ.

ಸೋಮವಾರ ಮಧ್ಯಾಹ್ನ 11 ಗಂಟೆಗೆ ದೆಹಲಿಯ ಆಮ್ ಆದ್ಮಿ ಪಕ್ಷದ ಕಚೇರಿಯಲ್ಲಿ ಅರವಿಂದ ಕೇಜ್ರಿವಾಲ್, ದೆಹಲಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ, ಆಮ್ ಆದ್ಮಿ ಪಕ್ಷದ ಕರ್ನಾಟಕದ ಸಂಚಾಲಕ ಪೃಥ್ವಿ ರೆಡ್ಡಿ ಸಮ್ಮುಖದಲ್ಲಿ ಭಾಸ್ಕರ್ ರಾವ್ ಆಮ್ ಆದ್ಮಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು.

1990ರಲ್ಲಿ ಭಾರತೀಯ ಪೊಲೀಸ್ ಸೇವೆಗೆ ಸೇರಿದ್ದ ಭಾಸ್ಕರ್ ರಾವ್, ಸದ್ಯ ರೈಲ್ವೆ ಪೊಲೀಸ್ ಎಡಿಜಿಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. 2021ರ ಸೆಪ್ಟೆಂಬರ್‌ನಲ್ಲಿ ಸ್ವಯಂ ನಿವೃತ್ತಿ ಬಯಸಿ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದರು. ಸರ್ಕಾರ ಕಳೆದ ವಾರವಷ್ಟೇ ಭಾಸ್ಕರ್ ರಾವ್ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದು, ಇದೀಗ ಎಎಪಿಯಲ್ಲಿ ರಾಜಕೀಯ ಭವಿಷ್ಯದ ಅಗ್ನಿ ಪರೀಕ್ಷೆಗೆ ಇಳಿದಿದ್ದಾರೆ. ಬಿ. ಭಾಸ್ಕರ್ ರಾವ್ ಮೂಲತಃ ಬೆಂಗಳೂರಿನವರಾಗಿದ್ದು, 1990ರಲ್ಲಿ ಭಾರತೀಯ ಪೊಲೀಸ್ ಸೇವೆಗೆ ಸೇರ್ಪಡೆಯಾಗಿದ್ದರು. ಬೆಂಗಳೂರಿನಲ್ಲಿ ಹುಟ್ಟಿ ಬೆಳೆದ ಭಾಸ್ಕರ್ ರಾವ್ ಬೆಂಗಳೂರು ಕಮೀಷನರ್ ಅಗಿ ಒಂದು ವರ್ಷ ಸೇವೆ ಸಲ್ಲಿಸಿದ್ದು ವಿಶೇಷ. ಕರ್ನಾಟಕ ಸಶಸ್ತ್ರ ಮೀಸಲು ಪಡೆಯ ಎಡಿಜಿಪಿಯಾಗಿದ್ದ ಭಾಸ್ಕರ್ ರಾವ್, 2019 ಆ.2ರಂದು ಬೆಂಗಳೂರು ಪೊಲೀಸ್ ಕಮೀಷನರ್ ಆಗಿ ಅಧಿಕಾರ ಸ್ವೀಕರಿಸಿದ್ದರು. ಇದರ ಜತೆಗೆ ಆಂತರಿಕ ಭದ್ರತೆ, ರೈಲ್ವೇ ಎಡಿಜಿಪಿ ಸೇರಿದಂತೆ ಹಲವು ಹುದ್ದೆಗಳನ್ನು ಅಲಂಕರಿಸಿದ್ದರು.