ಮನೆ ರಾಜಕೀಯ ಮೇಲ್ಮನೆ ಉಪಚುನಾವಣೆ: ಇಂದಿನಿಂದ ನಾಮಪತ್ರ ಸಲ್ಲಿಕೆ

ಮೇಲ್ಮನೆ ಉಪಚುನಾವಣೆ: ಇಂದಿನಿಂದ ನಾಮಪತ್ರ ಸಲ್ಲಿಕೆ

0

ಬೆಂಗಳೂರು: ವಿಧಾನ ಪರಿಷತ್‌ ನಲ್ಲಿ ತೆರವಾದ ಮೂರು ಸ್ಥಾನಗಳಿಗೆ ಉಪಚುನಾವಣೆ ಘೋಷಣೆಯಾಗಿದ್ದು, ಜೂ. 30ಕ್ಕೆ ಮತದಾನ ನಡೆಯಲಿದೆ.

Join Our Whatsapp Group

ಕರ್ನಾಟಕ ವಿಧಾನಸಭೆಯಿಂದ ವಿಧಾನಪರಿಷತ್ತಿನ ಮೂರು ಸ್ಥಾನಗಳಿಗೆ ನಡೆಯುವ ಉಪಚುನಾವಣೆಗೆ ಇಂದಿನಿಂದ (ಜೂನ್ 13) ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ.

ಸಂಖ್ಯಾಬಲದ ದೃಷ್ಟಿಯಿಂದ ಆಡಳಿತಾರೂಢ ಕಾಂಗ್ರೆಸ್‌ ಪಕ್ಷಕ್ಕೆ ಮೂರು ಸ್ಥಾನಗಳು ಲಭಿಸುವುದು ನಿಶ್ಚಿತವಾಗಿದೆ. ಈ ಹಿನ್ನೆಲೆಯಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸದಿರುವುದಕ್ಕೆ ಜೆಡಿಎಸ್‌ ತೀರ್ಮಾನಿಸಿದೆ. ಬಿಜೆಪಿ ಕೂಡ ಅಭ್ಯರ್ಥಿಯನ್ನು ಕಣಕ್ಕಿಳಿಸುವುದು ಅನುಮಾನ. ಹೀಗಾಗಿ ಕಾಂಗ್ರೆಸ್​ ನ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆಗಳಿವೆ.

ಮೂರು ಸ್ಥಾನಗಳು ಬೇರೆ ಬೇರೆ ಅವಧಿಯಲ್ಲಿ ಮುಕ್ತಾಯಗೊಳ್ಳುವುದರಿಂದ ಪ್ರತ್ಯೇಕವಾಗಿ ಮೂರು ಅಧಿಸೂಚನೆಯನ್ನು ಪ್ರಕಟಿಸಲಾಗುತ್ತದೆ. ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಈ ಕ್ರಮ ಕೈಗೊಳ್ಳಲಿದ್ದು, ಒಂದೇ ದಿನ ಮೂರು ಸ್ಥಾನಗಳಿಗೆ ಪ್ರತ್ಯೇಕ ಚುನಾವಣೆ ನಡೆಯಲಿದೆ.

ಈ ತಿಂಗಳ 20ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. 21ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, 23ರಂದು ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನವಾಗಿದೆ. ಜೂ.30ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದ್ದು, ಅಂದೇ ಸಂಜೆ 5 ಗಂಟೆಗೆ ಮತ ಎಣಿಕೆ ನಡೆಯಲಿದೆ.

ವಿಧಾನಸಭೆಯಿಂದ ವಿಧಾನ ಪರಿಷತ್‌ ಗೆ ನಡೆದ ಚುನಾವಣೆಯಲ್ಲಿ ಬಿಜೆಪಿಯಿಂದ ಆಯ್ಕೆಯಾಗಿದ್ದ ಬಾಬುರಾವ್‌ ಚಿಂಚನಸೂರು, ಆರ್‌.ಶಂಕರ್‌ ಮತ್ತು ಲಕ್ಷ್ಮಣ್‌ ಸವದಿ ಅವರು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಸಂಬಂಧ ಪಕ್ಷ ತೊರೆದು ರಾಜೀನಾಮೆ ನೀಡಿದ ಈ ಹಿನ್ನೆಲೆಯಲ್ಲಿ ಉಪ ಚುನಾವಣೆ ಘೋಷಣೆಯಾಗಿದೆ.