ಮನೆ ಸುದ್ದಿ ಜಾಲ ಏ.೧೦ರವರೆಗೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ

ಏ.೧೦ರವರೆಗೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ

0

ಬೆಂಗಳೂರು(Bengaluru): ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ತೀವ್ರ ಹಾನಿಯಾಗಿದೆ. ರಾಜ್ಯಾದ್ಯಂತ ಏ. 10ರವರೆಗೂ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.
ಕಳೆದ 15 ದಿನದಿಂದ ಕರ್ನಾಟಕದಲ್ಲಿ (Rain in Karnataka) ಮಳೆಯಾಗುತ್ತಿದ್ದು, ಭಾನುವಾರದವರೆಗೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಏ. 11ರವರೆಗೂ ಮಳೆ ಮುಂದುವರೆಯಲಿದೆ. ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಉತ್ತರ ಕನ್ನಡ, ಹಾಸನ, ದಾವಣಗೆರೆ, ಬೆಂಗಳೂರು, ಮೈಸೂರು, ಕೊಡಗು ಮುಂತಾದ ಕಡೆ ಮಳೆಯ ಆರ್ಭಟ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ತಮಿಳುನಾಡಿನ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಗುಡುಗು ಸಹಿತ ಮಳೆಯಾಗುತ್ತಿದೆ.
ಚಾಮರಾಜನಗರದಲ್ಲಿ ಕಳೆದ 15 ದಿನಗಳಿಂದ ಸುರಿದ ಮಳೆಯಿಂದಾಗಿ 183 ಹೆಕ್ಟೇರ್ ಭೂಮಿಯ ಬೆಳೆ ನಾಶವಾಗಿದೆ.
ತಮಿಳುನಾಡು, ಕೇರಳ, ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಏಪ್ರಿಲ್ 10ರವರೆಗೂ ಮಳೆಯಾಗಲಿದೆ. ಕರಾವಳಿ ಮಾತ್ರವಲ್ಲದೆ ಬೆಂಗಳೂರು, ಚಾಮರಾಜನಗರ, ಮೈಸೂರು, ಹಾಸನ, ಮಂಡ್ಯ, ರಾಮನಗರ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಕೂಡ ಇಂದು ಮಳೆಯಾಗುವ ಸಾಧ್ಯತೆ ಇದೆ. ತಮಿಳುನಾಡಿನ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಭಾರೀ ಮಳೆಯಾಗಲಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗುವ ಸಾಧ್ಯತೆಯಿದ್ದು, ಇಂದಿನಿಂದ 4 ದಿನ ಗುಡುಗು ಸಹಿತ ಮಳೆಯಾಗಲಿದೆ.
ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ ಮತ್ತು ಪಶ್ಚಿಮ ಬಂಗಾಳದಲ್ಲಿ ಮಳೆ ಆರಂಭವಾಗಿದೆ. ಮುಂದಿನ 3 ದಿನಗಳ ಕಾಲ ಕರಾವಳಿ ಕರ್ನಾಟಕ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕೇರಳ, ಮಾಹೆ, ತಮಿಳುನಾಡು, ಪುದುಚೇರಿ, ಕಾರೈಕಲ್, ಕರಾವಳಿ ಮತ್ತು ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಇಂದು ಚದುರಿದ ಮಳೆಯಾಗುವ ಸಾಧ್ಯತೆಯಿದೆ. ಕೇರಳ ಮತ್ತು ಮಾಹೆಯಲ್ಲಿ ಮುಂದಿನ 3 ದಿನಗಳಲ್ಲಿ ಗುಡುಗು ಮತ್ತು ಮಿಂಚಿನ ಆರ್ಭಟ ಇರಲಿದೆ.
ಮುಂದಿನ 4 ದಿನಗಳ ಕಾಲ ಅರುಣಾಚಲ ಪ್ರದೇಶ, ಹಿಮಾಲಯ ಪ್ರದೇಶ, ಸಿಕ್ಕಿಂ, ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಚದುರಿದಂತೆ ಮಳೆಯಾಗಲಿದೆ ಎಂದು ಮಾಹಿತಿ ನೀಡಲಾಗಿದೆ. ನಾಗಾಲ್ಯಾಂಡ್, ಮಣಿಪುರ, ತ್ರಿಪುರದಲ್ಲಿಯೂ ಸಾಧಾರಣ ಮಳೆಯಾಗಲಿದೆ. ಮುಂದಿನ ಒಂದೆರಡು ದಿನಗಳಲ್ಲಿ ಕರ್ನಾಟಕ, ಕೇರಳ, ತಮಿಳುನಾಡು, ಆಂಧ್ರ ಪ್ರದೇಶ ಮತ್ತು ಲಕ್ಷದ್ವೀಪದ ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುತ್ತದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಕೂಡ ಗುಡುಗು ಸಹಿತ ಮಳೆಯಾಗಲಿದೆ.
ಇಂದು ಅರುಣಾಚಲ ಪ್ರದೇಶ, ಉಪ-ಹಿಮಾಲಯ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಅಸ್ಸಾಂ ಮತ್ತು ಮೇಘಾಲಯದಲ್ಲಿ ಸಾಕಷ್ಟು ವ್ಯಾಪಕವಾದ ಮಳೆಯಾಗುವ ನಿರೀಕ್ಷೆಯಿದೆ. ಕೇರಳ ಮತ್ತು ಲಕ್ಷದ್ವೀಪದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಕೊಂಕಣ, ಗೋವಾ, ಮಧ್ಯ ಮಹಾರಾಷ್ಟ್ರ, ತಮಿಳುನಾಡು ಮತ್ತು ಕರ್ನಾಟಕದಲ್ಲಿ ಕೂಡ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ರಾಜಸ್ಥಾನ, ಗುಜರಾತ್, ಒಡಿಶಾ, ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ಪ್ರದೇಶ, ಮಧ್ಯಪ್ರದೇಶ, ಮಹಾರಾಷ್ಟ್ರ, ಬಿಹಾರ ಮತ್ತು ಛತ್ತೀಸ್‌ಗಢದಲ್ಲಿ ಬಿಸಿಗಾಳಿಯ ಪರಿಸ್ಥಿತಿಗಳು ಇರುತ್ತವೆ.