ಬೆಂಗಳೂರು: ಅಬಕಾರಿ ತೆರಿಗೆ ಶೇ.20ರಷ್ಟು ಹೆಚ್ಚಳ ಮಾಡುವುದಾಗಿ ಬಜೆಟ್ ನಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ.
ಇಂದು ವಿಧಾನಸಭೆಯಲ್ಲಿ 2023-24ನೇ ಸಾಲಿನ ಬಜೆಟ್ ಅನ್ನು ಸಿಎಂ ಸಿದ್ಧರಾಮಯ್ಯ ಮಂಡಿಸುತ್ತಿದ್ದು, ಅಬಕಾರಿ ತೆರಿಗೆ ಶೇ.20ರಷ್ಟು ಹೆಚ್ಚಳ. ಬಿಯರ್ ಮೇಲಿನ ಅಬಕಾರಿ ಸುಂಕ ಶೇ.10ರಷ್ಟು ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.
ಹಿಂದಿನ ಸರ್ಕಾರದಿಂದ ರಾಜ್ಯದ ಆರ್ಥಿಕತೆಯು ಕತ್ತಲೆಯಲ್ಲಿ ಮುಳುಗಿದ್ದರೂ, ರಾಜ್ಯದ ಆರ್ಥಿಕತೆಯನ್ನು ಪುನಶ್ಚೇತನಗೊಳಿಸಲು ದೃಢ ನಿಲುವನ್ನು ತೆಗೆದುಕೊಳ್ಳಲು ನಾನು ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ. ರಾಜ್ಯದ ಜನತೆಯು ನಮ್ಮ ಸರ್ಕಾರದ ಮೇಲೆ ನಂಬಿಕೆಯನ್ನಿರಿಸಿ ಸ್ಪಷ್ಟ ಬಹುಮತವನ್ನು ನೀಡಿರುತ್ತಾರೆ. ಜನರ ಆಶೋತ್ತರಗಳನ್ನು ಈಡೇರಿಸಲು ನಾನು ಕಂಕಣಬದ್ಧನಾಗಿರುತ್ತೇನೆ. ನಮ್ಮ ಸರ್ಕಾರವು ಎಲ್ಲಾ ಐದು ಗ್ಯಾರಂಟಿಗಳನ್ನು ಪೂರೈಸಲು, ಅಗತ್ಯವಿರುವ ಆದಾಯವನ್ನು ಸೃಜಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ. ಪ್ರಸಕ್ತ ಸಾಲಿನಲ್ಲಿ ಬಂಡವಾಳ ಹೂಡಿಕೆ ಹಾಗೂ ನೇರ ನಗದು ವರ್ಗಾವಣೆಯಿಂದ ರಾಜ್ಯದ ಆರ್ಥಿಕತೆಯನ್ನು ಉತ್ತೇಜಿಸಿ, ದೊಡ್ಡ ಪ್ರಮಾಣದ ಉದ್ಯೋಗ ಸೃಷ್ಟಿಗೆ ಸ್ಪಷ್ಟ ಯೋಜನೆಗಳನ್ನು ರೂಪಿಸಲಾಗುವುದು ಎಂದಿದ್ದಾರೆ.