ವರ್ಧನ್ನಪೇಟೆ (ತೆಲಂಗಾಣ): ವರಂಗಲ್ ಜಿಲ್ಲೆಯ ವರ್ಧನ್ನಪೇಟೆ ಮಂಡಲದ ಇಲ್ಲಂದ ಎಂಬಲ್ಲಿ ಬುಧವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಐವರು ಮೃತಪಟ್ಟಿದ್ದಾರೆ.
ವರಂಗಲ್ ಕಡೆಯಿಂದ ತೋರೂರು ಕಡೆಗೆ ಹೋಗುತ್ತಿದ್ದ ಆಟೋಗೆ ಎದುರಿನಿಂದ ಬರುತ್ತಿದ್ದ ಲಾರಿಯೊಂದು ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಐವರು ಮೃತಪಟ್ಟಿದ್ದಾರೆ.
ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೊಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಮೃತಪಟ್ಟಿದ್ದಾರೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸ್ಥಳೀಯರ ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಕುರಿತು ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭಿಸಲಾಗಿದೆ.
ಮೃತಪಟ್ಟವರು ಜೇನು ಮಾರಾಟ ಮಾಡುವ ಕಾರ್ಮಿಕರು ಎಂದು ಗುರುತಿಸಲಾಗಿದೆ. ರಾಜಸ್ಥಾನ ಮೂಲದ ಚಾಲಕ ಕುಡಿದ ಮತ್ತಿನಲ್ಲಿ ಲಾರಿ ಚಲಾಯಿಸುತ್ತಿದ್ದ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.














