ಮನೆ ರಾಜ್ಯ ಎಲ್ಲಾ ಶಾಲೆಗಳಲ್ಲಿ ಸಂವಿಧಾನದ ಪ್ರಸ್ತಾವನೆ ಓದು: ಸೆ.5 ರಂದು ಜಾರಿಯಾಗಲಿದೆ ಎಂದ ಮಧು ಬಂಗಾರಪ್ಪ

ಎಲ್ಲಾ ಶಾಲೆಗಳಲ್ಲಿ ಸಂವಿಧಾನದ ಪ್ರಸ್ತಾವನೆ ಓದು: ಸೆ.5 ರಂದು ಜಾರಿಯಾಗಲಿದೆ ಎಂದ ಮಧು ಬಂಗಾರಪ್ಪ

0

ಧಾರವಾಡ: ಎಲ್ಲ ಶಾಲೆಗಳಲ್ಲಿ ವಿದ್ಯಾರ್ಥಿಗಳು ಸಂವಿಧಾನದ ಪ್ರಸ್ತಾವನೆಯನ್ನು ಪ್ರತಿದಿನ ಕಡ್ಡಾಯವಾಗಿ ಓದುವ ಕಾರ್ಯಕ್ರಮ ಜಾರಿಗೊಳಿಸಲು ನಿರ್ಧರಿಸಲಾಗಿದೆ. ಸೆ.5ರಂದು ಶಿಕ್ಷಕರ ದಿನ ಈ ಕಾರ್ಯಕ್ರಮ ಅನುಷ್ಠಾನವಾಗಲಿದೆ’ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಬೆಂಗಳೂರಿನ ಇಕೋ ವಾಚ್‌ ಸಂಘಟನೆ, ಕರ್ನಾಟಕ ವಿದ್ಯಾವರ್ಧಕ ಸಂಘ ಹಾಗೂ ಬಾಲ ಬಳಗ ಸೃಜನಶೀಲ ಶಿಕ್ಷಣ ಪ್ರತಿಷ್ಠಾನ ವತಿಯಿಂದ ವಿದ್ಯಾವರ್ಧಕ ಸಂಘದ ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿ ಸೋಮವಾರ ಆಯೋಜಿಸಿದ್ದ ಮಕ್ಕಳ ನಡಿಗೆ ಹಸಿರಿನ ಕಡೆಗೆ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಇನ್ನು ಎರಡು ದಿನಗಳಲ್ಲಿ ಆದೇಶ ಹೊರಬೀಳಲಿದೆ. ದೇಶದಲ್ಲಿನ ಪ್ರಜೆಗಳೆಲ್ಲರೂ ಅನ್ಯೋನ್ಯವಾಗಿ ಬಾಳಲು ಸಂವಿಧಾನ ಅವಕಾಶ ಮಾಡಿಕೊಟ್ಟಿದೆ. ಸಂವಿಧಾನ ಪ್ರಸ್ತಾವನೆಯನ್ನು ಎಲ್ಲರೂ ಓದಿ ತಿಳಿದುಕೊಳ್ಳಬೇಕು ಎಂಬುದು ಈ ಕಾರ್ಯಕ್ರಮ ಆಶಯ ಎಂದು ಅವರು ಹೇಳಿದರು.

ಶಾಲಾ ಮತ್ತು ಸಾಕ್ಷರತಾ ಶಿಕ್ಷಣ ಇಲಾಖೆ ಹಾಗೂ ಅರಣ್ಯ ಇಲಾಖೆ ಸಹಯೋಗದಲ್ಲಿ ಈ ವರ್ಷ 50 ಲಕ್ಷ ಸಸಿಗಳನ್ನು ನೆಡಲು ತೀರ್ಮಾನಿಸಲಾಗಿದೆ. ಶಾಲೆಗಳಲ್ಲಿ ಮಕ್ಕಳು ಮಧ್ಯಾಹ್ನ ಬಿಸಿಯೂಟ ಸೇವನೆ ನಂತರ ಗಿಡದ ಬುಡದಲ್ಲಿ ಆ ತಟ್ಟೆಯ ತೊಳೆಯುವಂತೆ ಮಾಡಲು ಉದ್ದೇಶಿಸಿದ್ದೇವೆ. ವಿದ್ಯಾರ್ಥಿಗಳು ವಿದ್ಯೆಯ ಜೊತೆಗೆ ಪರಿಸರ ಪ್ರೇಮ ಮೈಗೂಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.

ಶಾಲಾ ಶಿಕ್ಷಣ ಇಲಾಖೆಯಲ್ಲಿ ಕೆಲವು ಸಮಸ್ಯೆಗಳು ಇವೆ. ಕೆಲವೆಡೆ ಶಾಲಾ ಕಟ್ಟಡ ಸಮಸ್ಯೆ, ಶಿಕ್ಷಕರ ಕೊರತೆ ಮೊದಲಾದ ಸಮಸ್ಯೆಗಳು ಇವೆ. ಇನ್ನು ಎರಡು ವರ್ಷಗಳಲ್ಲಿ ಈ ಸಮಸ್ಯೆಗಳನ್ನು ಪರಿಹರಿಸುವ ಗುರಿ ಇಟ್ಟುಕೊಂಡಿದ್ದೇನೆ ಎಂದು ಹೇಳಿದರು.