ಮನೆ Breaking News ತಮಿಳುನಾಡಿಗೆ 15 ದಿನ ನಿತ್ಯ 5 ಸಾವಿರ ಕ್ಯೂಸೆಕ್ ನೀರು ಹರಿಸಲು ಸುಪ್ರೀಂ ಕೋರ್ಟ್ ಆದೇಶ

ತಮಿಳುನಾಡಿಗೆ 15 ದಿನ ನಿತ್ಯ 5 ಸಾವಿರ ಕ್ಯೂಸೆಕ್ ನೀರು ಹರಿಸಲು ಸುಪ್ರೀಂ ಕೋರ್ಟ್ ಆದೇಶ

0

ನವದೆಹಲಿ: ಕಾವೇರಿ ಜಲ ಹಂಚಿಕೆ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ 15 ದಿನಗಳ ಕಾಲ 5 ಸಾವಿರ ಕ್ಯೂಸೆಕ್ ನೀರನ್ನು ತಮಿಳು ನಾಡಿಗೆ ಬಿಡಬೇಕೆಂದು ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿ ಬಿ ಆರ್ ಗವಾಯಿ ನೇತೃತ್ವದ ತ್ರಿಸದಸ್ಯ ಪೀಠ ಆದೇಶ ನೀಡಿದೆ.

ಈ ಮೂಲಕ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ(CWMA) ಮತ್ತು ಕಾವೇರಿ ನೀರು ನಿಯಂತ್ರಣ ಸಮಿತಿ(CWRC)ಯ ಆದೇಶವನ್ನು ಯಥಾವತ್ತಾಗಿ ಜಾರಿಗೆ ತರಬೇಕೆಂದು ಸೂಚಿಸಿದೆ.

ನ್ಯಾಯಾಲಯ ಇಂದು ಬೆಳಗ್ಗೆ 10.30ಕ್ಕೆ ವಿಚಾರಣೆ ಆರಂಭಿಸಿತು. ತಮಿಳುನಾಡು ಪರ ವಕೀಲರಾದ ಮುಕುಲ್​ ರೋಹಟಗಿ ಮತ್ತು ಕರ್ನಾಟಕದ ಪರ ವಕೀಲ ಶ್ಯಾಮ್​ ದಿವಾನ್​ ತಮ್ಮ ತಮ್ಮ ವಾದವನ್ನು ಮಂಡಿಸಿದರು.

ಪ್ರಸ್ತುತ ನೀರಿನ ಸಂಕಷ್ಟ ಇದೆ ಅನ್ನೋದು ಎಲ್ಲರಿಗೂ ಗೊತ್ತಿದೆ. ಆದರೆ, ಸಂಕಷ್ಟ ಸೂತ್ರವನ್ನು ಕರ್ನಾಟಕ ಪಾಲಿಸುತ್ತಿಲ್ಲ. ನಾವು ಬಹಳಷ್ಟು ಕಡಿಮೆ ನೀರನ್ನು ಪಡೆಯುತ್ತಿದ್ದೇವೆ ಎಂದು ತಮಿಳುನಾಡು ಪರ ವಕೀಲ ಮುಕುಲ್​ ರೋಹಟಗಿ ವಾದ ಮಂಡನೆ ಮಾಡಿದರು.

ಕರ್ನಾಟಕ ಪರ ವಾದ ಮಂಡಿಸಿದ ಶ್ಯಾಮ್​ ದಿವಾನ್​, ಕಾವೇರಿ ನೀರು ನಿಯಂತ್ರಣ ಸಮಿತಿ ನೀಡಿರುವ ಆದೇಶವನ್ನು ನಾವು ಪಾಲಿಸಿದ್ದೇವೆ ಎಂದರು.

ವಾದ-ವಿವಾದಗಳನ್ನು ಆಲಿಸಿದ ಬಳಿಕ ನ್ಯಾಯಮೂರ್ತಿ ಬಿ.ಆರ್ ಗವಾಯಿ ನೇತೃತ್ವದ ತ್ರಿಸದಸ್ಯ ಪೀಠ ತಮಿಳುನಾಡಿಗೆ ನೀರು ಹರಿಸಲು ಆದೇಶ ಹೊರಡಿಸಿತು. ಇದರಿಂದ ಕರ್ನಾಟಕಕ್ಕೆ ಸುಪ್ರೀಂಕೋರ್ಟ್​ ನಲ್ಲೂ ಹಿನ್ನೆಡೆಯಾಗಿದೆ.

ತಮಿಳುನಾಡಿಗೆ ಸದ್ಯಕ್ಕೆ ಕರ್ನಾಟಕ 5,000 ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯುಎಂಎ) ನೀಡಿರುವ ಆದೇಶದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಪ್ರತಿ 15 ದಿನಗಳಿಗೊಮ್ಮೆ ಸಭೆ ನಡೆಸುವಂತೆ ಸುಪ್ರೀಂ ಕೋರ್ಟ್ ಪ್ರಾಧಿಕಾರಕ್ಕೆ ಸೂಚಿಸಿದೆ.