ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ದೂರವಾಣಿ ಕರೆ ಮಾಡಿದ್ದು, ಆರೋಗ್ಯ ವಿಚಾರಿಸಿದ್ದಾರೆ.
ಬಸವರಾಜ ಬೊಮ್ಮಾಯಿ ಬನ್ನೇರುಘಟ್ಟ ಫೋರ್ಟಿಸ್ ಆಸ್ಪತ್ರೆಯಲ್ಲಿ ಯಶಸ್ವಿ ಬೈಪಾಸ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ.
ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು, ಸ್ವತಃ ದೂರವಾಣಿ ಮೂಲಕ ಕರೆ ಮಾಡಿ, ಬೊಮ್ಮಾಯಿ ಆರೋಗ್ಯ ವಿಚಾರಿಸಿದ್ದಾರೆ. ಈ ವೇಳೆ ಶೀಘ್ರ ಗುಣಮುಖರಾಗುವಂತೆ ಶುಭ ಕೋರಿದ್ದು, ಆರೋಗ್ಯದ ಕಡೆ ಗಮನ ಕೊಡುವಂತೆ ಸಲಹೆ ನೀಡಿದ್ದಾರೆಂದು ತಿಳಿದುಬಂದಿದೆ.
ಮೋದಿಯವರು ತಮ್ಮ ಆರೋಗ್ಯ ವಿಚಾರಿಸಿರುವ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಬೊಮ್ಮಾಯಿಯವರು ಟ್ವೀಟ್ ಮಾಡಿದ್ದಾರೆ.
ಶಸ್ತ್ರಚಿಕಿತ್ಸೆಗೆ ಒಳಗಾಗಿ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಸಂದರ್ಭದಲ್ಲಿ ನನಗೆ ದೂರವಾಣಿ ಕರೆ ಮಾಡಿ ನನ್ನ ಆರೋಗ್ಯ ಕುಶಲೋಪರಿಯನ್ನು ವಿಚಾರಿಸಿದ ದೇಶದ ಹೆಮ್ಮೆಯ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರಿಗೆ ತುಂಬು ಹೃದಯದ ಧನ್ಯವಾದಗಳು. ನಿಮ್ಮ ಕಾಳಜಿ ಮತ್ತು ಶುಭ ಹಾರೈಕೆ ನನ್ನ ಆತ್ಮಸ್ಥೈರ್ಯವನ್ನು ಹೆಚ್ಚಿಸಿದ್ದು, ಆದಷ್ಟು ಬೇಗ ಸಂಪೂರ್ಣ ಗುಣಮುಖನಾಗಿ ಜನಸೇವೆಗೆ ಮರಳುತ್ತೇನೆಂದು ಹೇಳಿದ್ದಾರೆ.














