ಮನೆ ಸ್ಥಳೀಯ ಮೈಸೂರು: ಫೆಬ್ರವರಿ 12 ರಂದು ಶ್ರೀ ಶಿವಯೋಗಿ  ಸಿದ್ಧರಾಮೇಶ್ವರ ಜಯಂತಿ

ಮೈಸೂರು: ಫೆಬ್ರವರಿ 12 ರಂದು ಶ್ರೀ ಶಿವಯೋಗಿ  ಸಿದ್ಧರಾಮೇಶ್ವರ ಜಯಂತಿ

0

ಮೈಸೂರು: ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಫೆಬ್ರವರಿ 12 ರಂದು ಕಿರು ರಂಗಮಂದಿರದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲು  ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಆರ್. ಲೋಕನಾಥ್ ಅವರು ತಿಳಿಸಿದರು.

ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಿದ್ಧರಾಮೇಶ್ವರ ಜಯಂತಿ ಆಚರಣೆ ಸಂಬಂಧ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಸರ್ಕಾರದ ಶಿಷ್ಟಾಚಾರದಂತೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಜಿಲ್ಲೆಗೆ ಕಾರ್ಯಕ್ರಮ ಮಾಡಲು 50 ಸಾವಿರ ಅನುದಾನ ಬಿಡುಗಡೆ ಮಾಡಲಾಗಿದೆ. ಈ ಸಂಬಂಧ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಮಾಡಲು ಅಗತ್ಯ ಕ್ರಮ ವಹಿಸಲಾಗುವುದು ಎಂದು ಅವರು ತಿಳಿಸಿದರು.

ಜಯಂತಿ ಕಾರ್ಯಕ್ರಮ ನಡೆಯುವ ಸ್ಥಳದ ಸ್ವಚ್ಚತೆ. ಕುಡಿಯುವ ನೀರಿನ ವ್ಯವಸ್ಥೆ, ಶಾಮಿಯಾನ ವ್ಯವಸ್ಥೆ ಮಾಡಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸಭೆಯಲ್ಲಿ ಸೂಚಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಎಂ.ಡಿ.  ಸುದರ್ಶನ್ ಅವರು ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಕಲಾತಂಡಗಳಿಂದ ಪ್ರದರ್ಶನ ಏರ್ಪಡಿಸಲಾಗುವುದು. ಆಹ್ವಾನ ಪತ್ರಿಕೆಯ ಮುದ್ರಣ ಮಾಡಿ ಸರ್ಕಾರದ ಶಿಷ್ಟಾಚಾರದಂತೆ ಜನ ಪ್ರತಿನಿಧಿಗಳನ್ನು ಆಹ್ವಾನಿಸಲಾಗುವುದು‌. ಈ ಸಂಬಂಧ ಸಮಿತಿಯವರು ಸಹಕರಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಭೋವಿ ಸಮುದಾಯದ ಅಧ್ಯಕ್ಷರಾದ ಜಿ. ನಾಗರಾಜ್, ಉಪಾಧ್ಯಕ್ಷರಾದ ಚಿನ್ನಸ್ವಾಮಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.