ಮನೆ ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ: 7 ನೇ ವೇತನ ಆಯೋಗದ ಅಂತಿಮ ವರದಿ ಬಂದ ನಂತರ...

ಸರ್ಕಾರಿ ನೌಕರರ ವೇತನ ಪರಿಷ್ಕರಣೆ: 7 ನೇ ವೇತನ ಆಯೋಗದ ಅಂತಿಮ ವರದಿ ಬಂದ ನಂತರ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

0

ಬೆಂಗಳೂರು: 7 ನೇ ವೇತನ ಆಯೋಗದ ಅಂತಿಮ ವರದಿ ಬಂದ ನಂತರ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಅವರ ನೇತೃತ್ವದ ನಿಯೋಗವು ಇಂದು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಸಂದರ್ಭದಲ್ಲಿ ಅವರು ಮಾತನಾಡಿದರು.

ಏಳನೇ ವೇತನ ಆಯೋಗ ರಚನೆಯಾಗಿ 12 ತಿಂಗಳಾಗಿದೆ. ಮಾರ್ಚ್ ವರೆಗೆ ಕಾಲಾವಧಿ ವಿಸ್ತರಣೆ ಯಾಗಿದ್ದು, ಚುನಾವಣಾ ನೀತಿ ಸಂಹಿತೆ ಘೋಷಣೆಯಾಗುವ ಮೊದಲೇ ವೇತನ ಪರಿಷ್ಕರಣೆ ಮಾಡಿ ಘೋಷಣೆ ಮಾಡುವಂತೆ ನಿಯೋಗ ಮನವಿ ಮಾಡಿತು. ಹೊಸ ಪಿಂಚಣಿ ಯೋಜನೆಯ ವ್ಯಾಪ್ತಿಯಲ್ಲಿದ್ದ 11366 ಜನರಿಗೆ ಹಳೆ ಪಿಂಚಣಿ ಯೋಜನೆಗೆ ಸೇರ್ಪಡೆ ಗೊಳಿಸಲಾಗಿದೆ. ಉಳಿದವರನ್ನೂ ಹಳೆ ಪಿಂಚಣಿ ಯೋಜನೆಗೆ ವ್ಯಾಪ್ತಿಗೆ ಸೇರಿಸಿ, ಪಿಂಚಣಿಗೆ ನೀಡುತ್ತಿರುವ ಕೊಡುಗೆಯನ್ನು ನಿಲ್ಲಿಸಲು ಆದೇಶಿಸಲು ಕೋರಿದರು.

ತೀವ್ರತರವಾದ 7 ಕಾಯಿಲೆಗಳಿಗೆ ಚಿಕಿತ್ಸೆ ಒದಗಿಸುವ ಜ್ಯೋತಿ ಸಂಜೀವಿನಿ ಆರೋಗ್ಯ ಯೋಜನೆಗೆ ಚಾಲನೆ ನೀಡಲಾಗಿತ್ತು. ಸರ್ಕಾರಿ ನೌಕರರ ಕುಟುಂಬದವರಿಗೆ ಉಚಿತ ಆರೋಗ್ಯ ಯೋಜನೆಯನ್ನು ಅನುಷ್ಠಾನ ಗೊಳಿಸಬೇಕು ಎಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಅವರು ಮನವಿ ಮಾಡಿದರು. ವಿವಿಧ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.