ಮೈಸೂರು: ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ನಂಜನಗೂಡು ತಾಲ್ಲೂಕಿನ ಸಿಂಧುವಳ್ಳಿ ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಗೆ ಸೋಮವಾರ ಅನಿರೀಕ್ಷಿತ ಭೇಟಿ ನೀಡಿ ಶಾಲೆಯ ಮೂಲಭೂತ ಸೌಕರ್ಯವನ್ನು ಪರಿಶೀಲಿಸಿದರು.
ಈ ವೇಳೆ ಭೋಜನಾಯಲಕ್ಕೆ ತೆರಳಿ ಆಹಾರದ ಗುಣಮಟ್ಟ ಪರಿಶೀಲಿಸಿದ ಸಚಿವರು, ಊಟ ಸೇವಿಸುತ್ತಿದ್ದ ವಿದ್ಯಾರ್ಥಿಗಳಿಂದ ಆಹಾರ ರುಚಿಯ ಬಗ್ಗೆ ಅಭಿಪ್ರಾಯ ಪಡೆದರು. ಬಳಿಯ ಆಹಾರ ತಯಾರಿಸುವ ಅಡುಗೆ ಕೋಣೆಗೆ ಭೇಟಿ ನೀಡಿ, ಅಡುಗೆ ಸಿಬ್ಬಂದಿಯು ಸ್ಚಚ್ಛವಾಗಿರಬೇಕು, ಕೊಣೆಯನ್ನು ಶುಚಿಯಾಗಿ ಇಟ್ಟುಕೊಳ್ಳಬೇಕು ಎಂದು ಸೂಚಿಸಿದರು.
ವಿದ್ಯಾರ್ಥಿಗಳಿಗೆ ಅತ್ಯಂತ ಗುಣಮಟ್ಟದ ಪೌಷ್ಠಿಕಾಂಶ ಹೊಂದಿರುವ ಆಹಾರ ನೀಡಬೇಕು. ಇಲಾಖೆಯಿಂದ ನಿಗದಿಪಡಿಸಿರುವ ಮೆನು ಚಾಟ್ ಪ್ರಕಾರವೇ ಉತ್ತಮವಾಗಿ ಆಹಾರಗಳನ್ನು ಸಿದ್ಧಪಡಿಸಬೇಕು. ಈ ವಿಷಯದಲ್ಲಿ ಯಾವುದೇ ವ್ಯಾತ್ಯಾಸವಾಗಬಾರದು ಎಂದು ನಿಲಯಪಾಲಕರಿಗೆ ಎಚ್ಚರಿಕೆ ನೀಡಿದರು.

ವಿದ್ಯಾರ್ಥಿಗಳು ವಾಸಿಸುವ ಕೊಠಡಿಗಳನ್ನು ಪರಿಶೀಲಿಸಿದ ಸಚಿವರು, ವಿದ್ಯಾರ್ಥಿಗಳಿಗೆ ಅವಶ್ಯಕ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡಬೇಕು. ಕೊಠಡಿಗಳಲ್ಲಿ ವಾಸಿಸಲು ಹಾಗೂ ಪಠ್ಯಕ್ಕೆ ಸಂಬಂಧಿಸಿದ ಅಧ್ಯಯನ ಮಾಡಲು ಯಾವುದೇ ಸಮಸ್ಯೆ ಉಂಟಾಗಬಾರದು ಎಂದು ಸಿಬ್ಬಂದಿಗೆ ಸೂಚನೆ ನೀಡಿದರು.
ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾದ ವಾತಾವರಣ ಸೃಷ್ಟಿಸಬೇಕು. ನಿಲಯದ ಶೌಚಾಲಯವು ಅತ್ಯಂತ ಸ್ವಚ್ಛತೆಯಿಂದ ಕೂಡಿರಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳವಂತೆ ಪ್ರೋತ್ಸಾಹಿಸಬೇಕು. ಅವರು ಆಸಕ್ತಿ ಹೊಂದಿರುವ ಕ್ರೀಡೆಗಳಲ್ಲಿ ಸಾಧನೆ ಮಾಡಲು ಪ್ರೇರಿಪಿಸಬೇಕು ಎಂದು ಸಲಹೆ ನೀಡಿದರು.
ಕಲಿಕೆಯಿಂದ ಯಾವುದೇ ಮಕ್ಕಳು ವಂಚಿತರಾಗಬಾರದು. ಈ ನಿಟ್ಟಿನಲ್ಲಿ ನಮ್ಮ ಸರ್ಕಾರವು ಶಾಲಾ ಮಕ್ಕಳ ಕಲಿಕೆಗೆ ಪೂರಕವಾಗುವ ಎಲ್ಲಾ ಸೌಕರ್ಯಗಳನ್ನು ಒದಗಿಸಲು ಕಟಿಬದ್ಧವಾಗಿದೆ. ಪ್ರತಿಯೊಬ್ಬರೂ ಶಿಕ್ಷಣ ಪಡೆದು ಜ್ಞಾನವಂತರಾಗಬೇಕೆಂಬುದು ನಮ್ಮ ಸರ್ಕಾರದ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕರಾದ ದರ್ಶನ್ ಧ್ರುವನಾರಾಯಣ ಅವರು, ಇಲಾಖೆ ಅಧಿಕಾರಿಗಳು, ಶಾಲೆಯ ಸಿಬ್ಬಂದಿ ಸೇರಿದಂತೆ ಮುಂತಾದವರು ಇದ್ದರು.














