ಬೆಂಗಳೂರು: ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗುತ್ತಿರುವ ಡಾ.ಸಿ.ಎನ್.ಮಂಜುನಾಥ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸುವಂತೆ ಸಿಎಂ ಸಿದ್ದರಾಮಯ್ಯಗೆ ವಿಪಕ್ಷ ನಾಯಕ ಆರ್.ಅಶೋಕ್ ಮನವಿ ಮಾಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಆರ್.ಅಶೋಕ್, ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕರಾಗಿ 16 ವರ್ಷಗಳ ಕಾಲ ಸೇವೆ ಸಲ್ಲಿಸಿ ಇಂದು ನಿವೃತ್ತರಾಗುತ್ತಿರುವ ನಾಡಿನ ಪ್ರಖ್ಯಾತ ವೈದ್ಯರಾದ ಡಾ.ಸಿ.ಎನ್.ಮಂಜುನಾಥ್ ಅವರ ನಿವೃತ್ತಿ ಜೀವನ ಸುಖಕರವಾಗಿರಲೆಂದು ಮನಸಾರೆ ಶುಭ ಹಾರೈಸುತ್ತೇನೆ.
ಬಡರೋಗಿಗಳ ಪಾಲಿನ ಆಶಾಕಿರಣವಾಗಿ “ಟ್ರೀಟ್ಮೆಂಟ್ ಫಸ್ಟ್, ಪೇಮೆಂಟ್ ನೆಕ್ಸ್ಟ್” ಎಂಬ ಪರಿಕಲ್ಪನೆಯನ್ನಿಟ್ಟುಕೊಂಡು ಸಾವಿರಾರು ಬಡ ರೋಗಿಗಳಿಗೆ ಚಿಕಿತ್ಸೆ ಕೊಟ್ಟ ಡಾ.ಮಂಜುನಾಥ್ ಅವರು ಬಡವರ ಪಾಲಿನ ಧನ್ವಂತರಿ ಅಂದರೆ ಅತಿಶಯೋಕ್ತಿಯಲ್ಲ ಎಂದಿದ್ದಾರೆ.
ಸರ್ಕಾರಿ ಆಸ್ಪತ್ರೆ ಎಂದರೆ ಮೂಗು ಮುರಿಯುವ ಕಾಲದಲ್ಲಿ ಯಾವುದೇ ಖಾಸಗಿ ಕಾರ್ಪೊರೇಟ್ ಆಸ್ಪತ್ರೆಗೆ ಕಡಿಮೆ ಇಲ್ಲದಂತೆ ಬಡವರಿಗೆ ಕೈಗೆಟಕುವ ದರದಲ್ಲಿ ಉತ್ಕೃಷ್ಟ ಆರೋಗ್ಯ ಸೇವೆ ನೀಡುವ ಮಟ್ಟಕ್ಕೆ ಒಂದು ಸರ್ಕಾರಿ ಸಂಸ್ಥೆಯನ್ನು ಕಟ್ಟಿಬೆಳೆಸಿದ ಅನನ್ಯ ಸಾಧನೆ ಮಾಡಿದ ಡಾ.ಸಿ.ಎನ್.ಮಂಜುನಾಥ್ ಅವರು ಕರ್ನಾಟಕದ ಹೆಮ್ಮೆಯ ಸುಪುತ್ರ. ಡಾ.ಸಿ.ಎನ್.ಮಂಜುನಾಥ್ ಅವರ ಸಾಧನೆಯನ್ನು ಗುರುತಿಸಿ, ಗೌರವಿಸಲು ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡುತ್ತೇನೆ ಎಂದು ಟ್ವಿಟ್ಟರ್ ನಲ್ಲಿ ಆರ್.ಅಶೋಕ್ ತಿಳಿಸಿದ್ದಾರೆ.














