ಬೆಂಗಳೂರು: ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಸಾಬೀತಾದರೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ದೇಶ ದ್ರೋಹಿಗಳನ್ನು ಮಟ್ಟಹಾಕಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನಸೌಧದ ಆವರಣದಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿರುವ ಆರೋಪಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆಯೇ ಎಂಬ ಬಗ್ಗೆ ಮೊದಲು ತನಿಖೆಯಾಗಬೇಕಿದೆ. ಅದಕ್ಕೆ ಸಂಬಂಧಿಸಿದ ವಿಡಿಯೋ ತುಣುಕುಗಳನ್ನು ಈಗಾಗಲೇ ವಿಧಿವಿಜ್ಞಾನ ಪ್ರಯೋಗಾಯಕ್ಕೆ ತನಿಖೆಗೆ ಕಳುಹಿಸಿಕೊಟ್ಟಿದ್ದೇವೆ. ಘೋಷಣೆ ಕೂಗಿದ್ದು ನಿಜವೇ ಆಗಿದ್ದರೆ ಕ್ರಮ ಕೈಗೊಳ್ಳುತ್ತೇವೆ. ತಪ್ಪಿತಸ್ಥರು ಯಾರೇ ಆಗಿರಲಿ, ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಘಟನೆ ಸಂಬಂಧ ಒಬ್ಬೊಬ್ಬರು ಒಂದೊಂದು ರೀತಿಯ ಹೇಳಿಕೆ ನೀಡುತ್ತಿದ್ದಾರೆ. ಕೆಲವರು ‘ನಾಸಿರ್ ಸಾಬ್’ ಎಂಬ ಘೋಷಣೆ ಕೂಗಲಾಗಿದೆ ಎಂದರೆ, ಇನ್ನು ಕೆಲವರು ‘ಪಾಕಿಸ್ತಾನ’ ಪರ ಘೋಷಣೆ ಎನ್ನುತ್ತಿದ್ದಾರೆ ಎಂದು ಗೃಹ ಸಚಿವ ಜಿ ಪರಮೇಶ್ವರ ಹೇಳಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರ ಪ್ರತಿಕ್ರಿಯೆ ಸಹ ಬಂದಿದೆ. ಘಟನೆ ಸಂಬಂಧ ಕಾನೂನು & ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಹಾಗೂ ನಗರ ಪೊಲೀಸ್ ಆಯುಕ್ತ ದಯಾನಂದ ಅವರು ಇಂದು ಬೆಳಗ್ಗೆ ಗೃಹ ಸಚಿವರನ್ನು ಭೇಟಿಯಾಗಿ ಮಾಹಿತಿ ನೀಡಿದ್ದಾರೆ.